ಮಡಿಕೇರಿ ಜ.3 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ವಿತರಿಸಿದರು.
ನಗರದ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೆಯೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿದರು.
ಬಳಿಕ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜ್ಞಾನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಉದ್ಯೋಗ ಪಡೆಯುವಂತಾಗಬೇಕು ಎಂದು ಅವರು ಸಲಹೆ ನೀಡಿದರು.
ಸಮಯವನ್ನು ವ್ಯರ್ಥ ಮಾಡದೆ ಇರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು ಎಂದು ಪುಟ್ಟರಾಜು ಅವರು ಹೇಳಿದರು.
ಕಳೆದ 2022 ರ ಏಪ್ರಿಲ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು. ಪ್ರಾಂಶುಪಾಲರಾದ ಪಿ.ಎಂ.ವಿಜಯ, ದೇವಕಿ, ಪುರುಷೋತ್ತಮ, ಸಿದ್ದರಾಜು ಬೆಳ್ಳಯ್ಯ ಇತರರು ಇದ್ದರು.

















