ಮಡಿಕೇರಿ ಜ.4 : ಇದೇ ಜ.28 ರಂದು ಮಡಿಕೇರಿ ತಾಲ್ಲೂಕಿನ 11 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಟ್ಟಗೇರಿಯ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ನುಡಿಜಾತ್ರೆಗೆ ಎಲ್ಲರೂ ಕೈಜೋಡಿಸುವಂತೆ ಶಾಸಕರು ಹಾಗೂ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಕೋರಿದ್ದಾರೆ.
ಬೆಟ್ಟಗೇರಿಯ ಉದಯ ಪ್ರೌಢಶಾಲೆ ಸಭಾಂಗಣದಲ್ಲಿ ಬುಧವಾರ ನಡೆದ ಮಡಿಕೇರಿ ತಾಲ್ಲೂಕು 11 ನೇ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಸಮ್ಮೇಳನ ಯಶಸ್ಸಿಗೆ ಸಹಕರಿಸುವಂತೆ ಶಾಸಕರು ಮನವಿ ಮಾಡಿದರು.
‘ಅಂತ್ಯತ ಕಡಿಮೆ ಖರ್ಚಿನಲ್ಲಿ ಅಕ್ಷರ ಜಾತ್ರೆಯನ್ನು ಯಶಸ್ಸುಗೊಳಿಸಲು ಎಲ್ಲರೂ ಶ್ರಮಿಸಬೇಕು. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹೀಗೆ ಎಲ್ಲರೂ ನಾಡು ನುಡಿಗೆ ಕೈಜೋಡಿಸುವಂತೆ ಶಾಸಕರು ಕೋರಿದರು.’
ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿರಿಸಿ ಕುಟುಂಬದಂತೆ ಎಲ್ಲರೂ ಕಾರ್ಯಕ್ರಮ ಯಶಸ್ಸಿಗೆ ಮುಂದಾಗಬೇಕು. ಬೆಟ್ಟಗೇರಿ ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಕನ್ನಡ ನಾಡು ನುಡಿಗೆ ಶ್ರಮಿಸಿ, ಒಳ್ಳೆಯ ಸಂದೇಶ ನೀಡುವಂತಾಗಬೇಕು. ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕನಿಷ್ಠ 5 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಮಾಡಬೇಕು ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ವೇದಿಕೆ, ಸಾಂಸ್ಕೃತಿಕ, ಆಹಾರ, ಮೆರವಣಿಗೆ, ಅಲಂಕಾರ, ಹೀಗೆ ವಿವಿಧ ಉಪ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು.
ವೇದಿಕೆಯಲ್ಲಿ ಸುಮಾರು 2500 ಕ್ಕೂ ಹೆಚ್ಚು ಜನರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಬೇಕು. ವೇದಿಕೆ ನಿರ್ಮಾಣ ಸಂಬಂಧಿಸಿದಂತೆ ವಿನ್ಯಾಸವನ್ನು ಸರಿಯಾಗಿ ಮಾಡಬೇಕು. ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪಿಡಿಒಗಳು, ಅಧಿಕಾರಿಗಳು ಮತ್ತು ಅಧಿಕಾರೇತರರು, ಸಹಕಾರ ಸಂಘಗಳ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲರೂ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.
ಕನ್ನಡ ನಾಡುನುಡಿ ಒಳಗೊಂಡ ಸ್ತಬ್ಧ ಚಿತ್ರ ನಿರ್ಮಾಣ ಮಾಡಬೇಕು. ಈ ಸಂಬAಧ ರಸ್ತೆ ಉದ್ದಕ್ಕೂ ತೋರಣ ಕಟ್ಟುವುದು, ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸುವುದು ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಉಪ ಸಮಿತಿಗಳಿಗೆ ಸಲಹೆ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿ ಬೆಟ್ಟಗೇರಿ ಸುತ್ತಮುತ್ತ ಎಲ್ಲಾ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಸೇರಿದಂತೆ ಎಲ್ಲರೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು ಕೋರಿದರು.
ಬೆಟ್ಟಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮದ ಹಿರಿಯರನ್ನು ಗೌರವಿಸುವುದು, ಸ್ಥಳೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವುದು, ಸ್ಮರಣ ಸಂಚಿಕೆ ಹೊರತರುವುದು, ಸ್ವಾಗತ, ವೇದಿಕೆ, ಮೆರವಣಿಗೆ, ಆಹಾರ, ಕವಿಗೋಷ್ಠಿ, ವಿಚಾರಗೋಷ್ಠಿಗೆ ಅಧ್ಯಕ್ಷರನ್ನು ನೇಮಿಸಲಾಗಿದ್ದು, ಎಲ್ಲರನ್ನು ಜವಾಬ್ದಾರಿಯನ್ನು ಹಂಚಿಕೊಂಡು ಸಮ್ಮೇಳನ ಯಶಸ್ಸಿಗೆ ಶ್ರಮಿಸಬೇಕು ಎಂದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ಅಂಬೆಕಲ್ ನವೀನ್ ಅವರು ತಾಲ್ಲೂಕು ಕನ್ನಡ ಸಾಹಿತ್ಯ ಹಬ್ಬಕ್ಕೆ ಎಲ್ಲರೂ ಕೈಜೋಡಿಸುವಂತಾಗಬೇಕು. ಹೊಂದಾಣಿಕೆಯಿಂದ ಎಲ್ಲರೂ ತಮ್ಮ ಮನೆಯ ಹಬ್ಬದಂತೆ ಸಮ್ಮೇಳನ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷರಾದ ಕುಡೆಕಲ್ ಸಂತೋಷ್ ಅವರು ಲೇಖನಗಳನ್ನು ಆಹ್ವಾನಿಸಿ ಸಾಂಕೇತಿಕವಾಗಿ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಈ ಸಂಬAಧ ಎಲ್ಲಾ ರೀತಿಯ ಮಾಹಿತಿ ಸಂಗ್ರಹಿಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ತಳೂರು ಕಿಶೋರ್ ಕುಮಾರ್ ಅವರು ಮಾತನಾಡಿ ಸಮ್ಮೇಳನ ಯಶಸ್ಸುಗೊಳಿಸುವ ನಿಟ್ಟಿನಲ್ಲಿ 12 ಉಪ ಸಮಿತಿಯ ಸಂಚಾಲಕರು ಮತ್ತು ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಗ್ರಾ.ಪಂ.ಕಚೇರಿ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಮತ್ತಿತರ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಧರ್ಮಸ್ಥಳ, ಸ್ವಸಹಾಯ, ಸ್ತ್ರೀ ಶಕ್ತಿ, ಹಾಗೆಯೇ ಸಂಜೀವಿನಿ ಒಕ್ಕೂಟ ಹೀಗೆ ಎಲ್ಲರೂ ಸಾಹಿತ್ಯ ಸಮ್ಮೇಳಕ್ಕೆ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೊಸೂರು ಸತೀಶ್ ಕುಮಾರ್ ಅವರು ಸಲಹೆ ಮಾಡಿದರು.
ಸಾಂಸ್ಕೃತಿಕ ಸಮಿತಿ ಸಂಬಂಧಿಸಿದಂತೆ ಮಾಹಿತಿ ನೀಡಿದ ಕಡ್ಲೇರ ತುಳಸಿ ಮೋಹನ್ ಅವರು ಕನ್ನಡ ನಾಡು ನುಡಿ, ಜೊತೆಗೆ ಕನ್ನಡ ಸೋದರ ಭಾಷೆಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಮಾಡಲಾಗುವುದು ಎಂದರು.
ವೇದಿಕೆ ಸಮಿತಿಯ ಪಟ್ಟಡ ಹೇಮಂತ್, ನೈರ್ಮಲ್ಯ ಸಮಿತಿಯ ಪಿಡಿಒ ಉದಯ, ಆರೋಗ್ಯ ಸಮಿತಿ, ಅಲಂಕಾರ ಮತ್ತಿತರ ಸಮಿತಿಯ ಅಧ್ಯಕ್ಷರು ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ನೈರ್ಮಲ್ಯ ಕಾಪಾಡುವಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತೀಯ ಸೇವಾದಳ ಹೀಗೆ ಎಲ್ಲರನ್ನು ತೊಡಗಿಸಿಕೊಳ್ಳಲು ಮನವಿ ಮಾಡುವಂತೆ ರೇವತಿ ರಮೇಶ್ ಅವರು ಸಲಹೆ ಮಾಡಿದರು.
ಬೆಟ್ಟಗೇರಿ ಗ್ರಾ.ಪಂ.ಅಧ್ಯಕ್ಷರಾದ ನಾಪಂಡ ರ‍್ಯಾಲಿ ಮಾದಯ್ಯ, ಉಪಾಧ್ಯಕ್ಷರಾದ ಕೃಷ್ಣಪ್ಪ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ತಾ.ಪಂ.ಇಒ ಶೇಖರ್, ಪ್ರಮುಖರಾದ ಕೊಡಪಾಲು ಗಣಪತಿ, ಕೋಡಿ ಮೋಟಯ್ಯ, ಬೆಪ್ಪುರನ ಮೇದಪ್ಪ, ಸುನಿಲ್ ಪತ್ರಾವೋ, ನೆರವಂಡ ಉಮೇಶ್, ಇತರರು ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*