ಮಡಿಕೇರಿ ಜ.12 : ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಸರಗೂರು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ , ಕೊಡಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಮಡಿಕೇರಿಯ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಬಿ.ಕೆ.ರವೀಂದ್ರ ರೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇಂತಹ ಕಾರ್ಯಕ್ರಮವನ್ನು ವೈದ್ಯರುಗಳು ಮತ್ತು ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ. ಕೆ.ಎನ್.ಚಂದ್ರಶೇಖರ್ , ಬಂಜೆತನ ನಿವಾರಣೆ ಕುರಿತಂತೆ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದ್ದು, ಈ ತರಬೇತಿ ಕಾರ್ಯಕ್ರಮದಲ್ಲಿ ನುರಿತ ವೈದ್ಯರುಗಳ ತಂಡದಿಂದ ಸಂತಾನ ಹೀನತೆಯನ್ನು ನಿವಾರಿಸಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಡಿಕೇರಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಮುರುಳೀಧರ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ ಹಾಗೂ ಇತರೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.