ಮಡಿಕೇರಿ ಜ.13 : ಮಡಿಕೇರಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಿಲಯದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಮಡಿಕೇರಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್. ಎಲ್. ದಿವಾಕರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಡಿ ಎಸ್ ಎಸ್, ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮವನ್ನು ಪ್ರಸ್ತಾಪಿಸುವ ಮೂಲಕ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಕೂಡ ಇಂತಹ ಸನ್ಮಾನಕ್ಕೆ ಭಾಜನಾರಾಗಬೇಕು ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸ್ನಾತಕೋತ್ತರ ಸಂಯೋಜಕಿ ಡಾ. ಹೆಚ್.ಕೆ.ರೇಣುಶ್ರೀ ಮಾತನಾಡಿ, ಸಮಯದ ಸದುಪಯೋಗ ಹಾಗೂ ಸಮಯದ ಮಹತ್ವದ ಕುರಿತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದರು.
ಡಿ ಎಸ್ ಎಸ್ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಶಿಕ್ಷಣದಲ್ಲಿರುವ ಹಂತಗಳು, ವಿವಿಧ ಕೋರ್ಸ್‌ಗಳನ ಬಗ್ಗೆ ಹಾಗೂ ಡಿ ಎಸ್ ಎಸ್ ನಡೆಸುವ ಶೈಕ್ಷಣಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಮೊದಲ ಆದ್ಯತೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ವಿದ್ಯಾರ್ಥಿನಿಯರು ತಮ್ಮ ಗುರಿಯನ್ನು ಮುಂದಿಟ್ಟುಕೊಂಡು ಕಲಿಕೆ ಮುಂದುವರೆಸಬೇಕು, ಇಲಾಖೆಯಲ್ಲಿ ಬಹಳಷ್ಟು ಸೌಲಭ್ಯಗಳಿದ್ದು ಅದರ ನೆರವನ್ನು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಚಂದನ್ ನಂದರಬೆಟ್ಟು, ಮಡಿಕೇರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಕಿಯರ ಬಾಲಮಂದಿರದ ಮೇಲ್ವಿಚಾರಕಿ ನಾಗರತ್ನ, ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯ ಪಾಲಕ ಸಿಂಧು ಹಾಗೂ ಜ್ಯೋತಿ, ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಶಂಭು, ಕರಾಟೆ ತರಬೇತುಗಾರ್ತಿ ಶಾರದ ಹಾಜರಿದ್ದರು.
ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿನಿಯರಿಗೆ ನಡೆದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.