ವಿರಾಜಪೇಟೆ ಜ.13 : ವಿರಾಜಪೇಟೆ ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜ.21ರಂದು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸರ್ವರೂ ಸಮ್ಮೇಳನ ಯಶಸ್ವಿಗೊಳಿಸುವಂತೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಹೇಳಿದರು.
ಆರ್ಜಿ ಗ್ರಾ.ಪಂ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೇಟೋಳಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿ ಸಮ್ಮೇಳನಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಎಲ್ಲಾ ಜನರ ಸಹಕಾರವು ಅಗತ್ಯವಾಗಿದೆ ಎಂದರು.
ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡಿ ತಾಲೂಕಿನಲ್ಲಿ ಇದು ಒಂಬತ್ತನೇ ಸಮ್ಮೇಳನ. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆಯಬೇಕಾಗಿದೆ. ಜ.21ರಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ನಂತರ ಸ್ತಬ್ಧ ಚಿತ್ರ ಹಾಗೂ ಪೂರ್ಣ ಕುಂಭದೊಂದಿಗೆ ಮೆರವಣಿಗೆ ನಡೆಯಲಿದೆ. ಬಳಿಕ ದ್ವಾರಗಳ ಉದ್ಘಾಟನೆ, ಸಭಾ ಕಾರ್ಯಕ್ರಮಗಳು ಹಾಗೂ ಕನ್ನಡ ಸಾಹಿತ್ಯದ ಬಗ್ಗೆ ಹೆಚ್ಚು ಒತ್ತು ನೀಡುವಂತಹ ಹಾಡುಗಳಿಗೆ ಅವಕಾಶ ನೀಡಲಾಗುವುದು ಎಂದರು.
ಸಮ್ಮೇಳನದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಗ್ರಾಮ ಅಭಿವೃದ್ಧಿ ಯೋಜನೆಯ ಸದಸ್ಯರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದು, ವ್ಯವಸ್ಥಿತವಾಗಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಕನ್ನಡ ಸಾಹಿತ್ಯ ಪರಿಷತ್ ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ.ಪಿ.ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ತಯಾರಿ ನಡೆಸಿದ್ದು, ಅಂದು ಬೇಟೋಳಿ ಮತ್ತು ಆರ್ಜಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವಂತೆ ತಿಳಿಸಲು ಶಾಸಕ ಬೋಪಯ್ಯ ಅವರನ್ನು ಮನವಿ ಮಾಡಿದಾಗ ಅದಕ್ಕೆ ಅವರು ಒಪ್ಪಿಗೆ ನೀಡಿದರು.
ಮೊದಲಿಗೆ ಸಾಹಿತಿ ಸಾರಾ ಅಬೂಬಕರ್ ಅವರ ನಿಧನಕ್ಕೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.
ಸಭೆಯಲ್ಲಿ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಮಧೋಶ್ ಪೂವಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ ಗಣೇಶ್, ಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ರಘು ನಾಣಯ್ಯ, ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧ, ಆರ್ಜಿ ಗ್ರಾ.ಪಂ ಅಧ್ಯಕ್ಷೆ ಹೆಚ್.ಜಿ.ಪಾರ್ವತಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಿ.ಮಣಿ, ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲೆ ಮಮತಾ, ಪರಿಷತ್ತಿನ ಕೋಶಾಧಿಕಾರಿ ಶಬರೀಶ್ ಶೆಟ್ಟಿ, ಗೌರವ ಕಾರ್ಯದರ್ಶಿ ಟಾಮಿ ತೋಮಸ್ ಹಾಗೂ ಸಾವಿತ್ರಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ಥಳೀಯ ಶಾಲೆಗಳ ಶಿಕ್ಷಕರು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮತ್ತಿತರರು ಭಾಗವಹಿಸಿದ್ದರು.