ಮಡಿಕೇರಿ ಜ.16 : ಇದೇ ಜ.30 ರಂದು ಹುತಾತ್ಮರ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಮೆರವಣಿಗೆ ಮೂಲಕ ಗಾಂಧಿ ಮೈದಾನಕ್ಕೆ ತೆಗೆದುಕೊಂಡು ಹೋಗುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದಲ್ಲಿರಿಸಿ ಬೆಳಗ್ಗೆ 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ, ನಂತರ 11 ಗಂಟೆಗೆ ಸರಿಯಾಗಿ 2 ನಿಮಿಷ ಮೌನ ಆಚರಣೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿ ಸ್ಮಾರಕ ನಿರ್ಮಾಣ ಸಂಬಂಧ 50 ಲಕ್ಷ ರೂ. ಬಿಡುಗಡೆಗೆ ಸರ್ಕಾರ ಆದೇಶ ಹೊರಡಿಸಿದೆ. ಆ ನಿಟ್ಟಿನಲ್ಲಿ 35 ಸೆಂಟ್ ಜಾಗವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಈಗಾಗಲೇ ಹಸ್ತಾಂತರಿಸಲಾಗಿದೆ. ಆದ್ದರಿಂದ ‘ಗಾಂಧೀಜಿ ಸ್ಮಾರಕ’ ನಿರ್ಮಾಣ ಸಂಬಂಧ ಮತ್ತೊಮ್ಮೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಸಲಹೆ ಮಾಡಿದರು.
ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ಅವರು ಮಾತನಾಡಿ 1934 ರಲ್ಲಿ ಮಹಾತ್ಮ ಗಾಂಧೀಜಿ ಅವರು ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಆ ಹಿನ್ನೆಲೆ ಗಾಂಧಿ ಮೈದಾನ ಎಂದು ಹೆಸರು ಬಂದಿದೆ. ಮಹಾತ್ಮ ಗಾಂಧೀಜಿಯವರು ಭಾಷಣ ಮಾಡಿದ ಸ್ಥಳದಲ್ಲಿ ಗಾಂಧಿ ಮಂಟಪ ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು.
ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಕೊಡಗು ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ತಂದು ಜಿಲ್ಲಾ ಖಜಾನೆಯಲ್ಲಿ ಇರಿಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಸದಸ್ಯರಾದ ಕಾನೆಹಿತ್ಲು ಮೊಣ್ಣಪ್ಪ, ಖಜಾನೆ ಇಲಾಖೆಯ ಸಹಾಯಕ ಖಜಾನಾಧಿಕಾರಿ ಕೆ.ಆರ್.ಕಲ್ಪನಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಂಘಟಕರಾದ ದಮಯಂತಿ, ಮಣಜೂರು ಮಂಜುನಾಥ್ ಇತರರು ಇದ್ದರು.