ಮಡಿಕೇರಿ ಜ.17 : ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ 64ನೇ ವರ್ಷದ ವಾರ್ಷಿಕ ಮಹಾರಥೋತ್ಸವವು ವಿವಿಧ ಧಾರ್ಮಿಕ ಕೈಂಕರ್ಯಗೊಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.
800ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ 64ನೇ ವರ್ಷದ ಮಹಾ ರಥೋತ್ಸವಕ್ಕೆ ಕೊಡಗು ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಸಹಸ್ತಾರು ಮಂದಿ ಭಕ್ತರು ಆಗಮಿಸಿ ವಿವಿಧ ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.
ಜ.13 ರಂದು ಪ್ರಾರ್ಥನಾ ಪೂಜೆಯೊಂದಿಗೆ ವಿದ್ಯುಕ್ತ ಚಾಲನೆಗೊಂಡಿರುವ ಜಾತ್ರೆಗೆ (ಜ.17) ಇಂದು ತೆರೆಬಿಳಲಿದೆ. ಜಾತ್ರೆಯ ಪ್ರಯುಕ್ತ ದೇವಾಲಯದಲ್ಲಿ ಕರುವಿನ ಹಬ್ಬ, ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವುದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ದೇವಾಲಯದಲ್ಲಿ ದೀಪೋತ್ಸವ, ಅರುಸು ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿತು.
ಸಮೀಪದ ಕೂತಿನಾಡು, ತೋಳುನಾಡು, ಪುಷ್ಪಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ ಹೊರ ಜಿಲ್ಲೆಯ ನೂರಾರು ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಶಾಂತಳ್ಳಿಯ ರಥಬೀದಿಯಲ್ಲಿ ಹೊರಟ ರಥವನ್ನು ಭಕ್ತಾಧಿಗಳು ಹರ್ಷೋದ್ಗಾರದೊಂದಿಗೆಗೆ ಸ್ವಾಗತಿಸಿದರು. ಜಾತ್ರೋತ್ಸವ ಅಂಗವಾಗು ದೇವಾಲಯ ಸಮಿತಿ ಆಶ್ರಯದಲ್ಲಿ ಭಕ್ತಾಧಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ತಾಲೂಕಿನ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ರೈತರು ಬೆಳೆದ ಬೆಳಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಸ್ಥಳೀಯ ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಅಂತರ ಜಿಲ್ಲಾ ಮಟ್ಟದ ಪರುಷರ ಮ್ಯಾಟ್ ಕಬ್ಬಡ್ಡಿ, ವಾಲಿಬಾಲ್ ಹಾಗೂ ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದವು. ಹೊರ ಜಿಲ್ಲೆಯ ನೂರಾರು ಕ್ರೀಡಾಪಟುಗಳು ಪಾಲ್ಗೊಂಡಿದ್ದರು.