ಮಡಿಕೇರಿ ಜ.17 : ಭಾರತ ಸರ್ಕಾರವು 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಉಚಿತವಾಗಿ ಎರಡನೆಯ ವರಸೆಯ ಹಾಗೂ ಮುಂಜಾಗ್ರತಾ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕೂಡ ಎಲ್ಲಾ ಆರೋಗ್ಯ ಕೇಂದ್ರಗಳ ಲಸಿಕಾ ವಿಭಾಗದಲ್ಲಿ ಕೋವಿಡ್ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎರಡನೇ ವರಸೆಯ ಒಟ್ಟು 10,707 ಫಲಾನುಭವಿಗಳು ಹಾಗೂ ಎರಡನೇ ವರಸೆಯ ಕೋವಿಡ್ ಲಸಿಕೆಯನ್ನು ಪಡೆದು 6 ತಿಂಗಳು ಪೂರೈಸಿರುವ 18 ವರ್ಷ ಮೇಲ್ಪಟ್ಟ ಒಟ್ಟು 3,14,296 ಫಲಾನುಭವಿಗಳು ಮುಂಜಾಗ್ರತಾ ಕೋವಿಡ್ ಲಸಿಕಾಕರಣಕ್ಕೆ ಬಾಕಿ ಇದ್ದು, ಈ ಎಲ್ಲಾ ಅರ್ಹರು ತಮ್ಮ ಸಮೀಪದ ಆರೋಗ್ಯ ಕೇಂದ್ರದಲ್ಲಿ ಪ್ರತಿ ದಿನ ನಡೆಯುವ ಲಸಿಕಾ ಶಿಬಿರದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಪಡೆಯುವಂತೆ ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕೋರಿದ್ದಾರೆ.