ವಿರಾಜಪೇಟೆ ಜ.18 : ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜ.21ರಂದು ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸರ್ವರೂ ಸಮ್ಮೇಳನ ಯಶಸ್ವಿಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ಹೇಳಿದರು.
ವಿರಾಜಪೇಟೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಇದು ಒಂಬತ್ತನೇ ಸಮ್ಮೇಳನ. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆಯಬೇಕಾಗಿದೆ. ಸಮ್ಮೇಳನಕ್ಕೆ ಈಗಾಗಲೇ ಎಲ್ಲಾ ಸಿದ್ದತೆ ನಡೆದಿದ್ದು ವಿವಿಧ ಸಮಿತಿ ರಚನೆ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹೆಸರಾಂತ ಪಕ್ಷಿತಜ್ಷ, ಸಾಹಿತಿ, ವೈದ್ಯರಾದ ಡಾ. ಎಸ್.ವಿ ನರಸಿಂಹನ್ ಅವರನ್ನು ಸರ್ವಾನುಮತದಿಂದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಜ.21ರಂದು ಬೆಳಿಗ್ಗೆ 8.30 ಕ್ಕೆ ಧ್ವಜಾರೋಹಣ ನಂತರ ಸ್ತಬ್ಧ ಚಿತ್ರ ಹಾಗೂ ಪೂರ್ಣ ಕುಂಭದೊಂದಿಗೆ ಮೆರವಣಿಗೆ ನಡೆಯಲಿದೆ. ಬಳಿಕ ದ್ವಾರಗಳ ಉದ್ಘಾಟನೆ, ಸಭಾ ಕಾರ್ಯಕ್ರಮಗಳು ಹಾಗೂ ಕನ್ನಡ ಸಾಹಿತ್ಯದ ಬಗ್ಗೆ ಹೆಚ್ಚು ಒತ್ತು ನೀಡುವಂತಹ ಹಾಡುಗಳಿಗೆ ಅವಕಾಶ ನೀಡಲಾಗುವುದು, ಸಮ್ಮೇಳನದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು, ಗ್ರಾಮ ಅಭಿವೃದ್ಧಿ ಯೋಜನೆಯ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಆರ್ಜಿ, ಬೇಟೋಳಿ ಗ್ರಾಮಸ್ಥರು, ಸಾಹಿತ್ಯಾಭಿಮಾನಿಗಳು ಭಾಗವಹಿಸಲಿದ್ದು, ವ್ಯವಸ್ಥಿತವಾಗಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಮ್ಮೇಳನದಂದು ಸದಸ್ಯತ್ವ ನೋಂದಣಿ ಸ್ಥಳದಲ್ಲೇ ಮಾಡಲಾಗುವುದು, ಮಾಜಿ ಸೈನಿಕರಿಗೆ ಉಚಿತವಾಗಿ ನೋಂದಣಿ ಮಾಡಿಕೊಡಲಾಗುವುದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸದಸ್ಯತ್ವ ನೋಂದಣಿ ಮಾಡಿಕೊಂಡು ಸಹಕರಿಸಬೇಕು ಎಂದು ವಿರಾಜಪೇಟೆ ಕಸಾಪದ ಕೋಶಾಧಿಕಾರಿ ಶಬರೀಶ್ ಶೆಟ್ಟಿ ಮನವಿ ಮಾಡಿದರು.
ಗೋಷ್ಟಿಯಲ್ಲಿ ಗೌರವ ಕಾರ್ಯದರ್ಶಿ ಟೋಮಿ ಥೋಮಸ್, ಕವಿಗೋಷ್ಟಿ ಸಮಿತಿಯ ಸಂಚಾಲಕಿ ವಿಮಲ ದಶರಥ್ ಹಾಜರಿದ್ದರು.















