ಮಡಿಕೇರಿ ಜ.20 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ‘ಸಾಮಾಜಿಕ ಅರಿವು’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ‘ನಗಾರಿ’ ಬಾರಿಸುವ ಮೂಲಕ ಚಾಲನೆ ನೀಡಿದರು.
ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸರ್ಕಾರ ಪ್ರಸಕ್ತ ಬಜೆಟ್‍ನಲ್ಲಿ ಘೋಷಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಸಾಮಾಜಿಕ ಅರಿವು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಮಾಡಿದೆ ಎಂದು ಅವರು ತಿಳಿಸಿದರು.
ಸಮಾಜದಲ್ಲಿ ಕಟ್ಟಕಡೆಯ ಜನರು ಸಹ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು. ಸಮಾಜದಲ್ಲಿ ಎಲ್ಲರೂ ಸಮಾನವಾಗಿ ಬದುಕಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಇದುವರೆಗೆ 140 ಕೋಟಿ ರೂ.ಗೂ ಹೆಚ್ಚು ಬೆಳೆ ಪರಿಹಾರ ವಿತರಿಸಲಾಗಿದ್ದು, ಆ ನಿಟ್ಟಿನಲ್ಲಿ ಬೆಳಕು ಚೆಲ್ಲುವಂತಾಗಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಅಧಿನಿಯಮ ಬಗ್ಗೆ ಬೀದಿನಾಟಕ ಮೂಲಕ ಸಾಮಾಜಿಕ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಕಲಾವಿದ ಈ.ರಾಜು ಮತ್ತು ತಂಡದವರು ಸರ್ಕಾರದ ಬಡ ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆ ಸೇರಿದಂತೆ ಹಲವು ಯೋಜನೆ ಜಾರಿಗೊಳಿಸಿರುವ ಬಗ್ಗೆ ಹಾಡಿನ ಮೂಲಕ ಮಾಹಿತಿ ನೀಡಿದರು. ಮಣಜೂರು ಮಂಜುನಾಥ್ ಇತರರು ಇದ್ದರು.









