ಮಡಿಕೇರಿ ಜ.25 : ಪ್ರಜಾಪ್ರಭುತ್ವದಲ್ಲಿ ಸರ್ಕಾರ, ಸಮಾಜ ಪ್ರಜೆಗಳಾಗಿದ್ದು, ಮತದಾನದ ಮೂಲಕ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿರುವ ಸರ್ಕಾರ ರಚಿಸಲು ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಇದರಿಂದ ಪ್ರಜಾಪ್ರಭುತ್ವ ಬಲಪಡಿಸಲು ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ ರಘು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮತದಾನ ಮಾಡುವುದು ಪವಿತ್ರ ಕಾರ್ಯವಾಗಿದ್ದು, ‘ಮತ’ವನ್ನು ಯಾವುದೇ ಕಾರಣಕ್ಕೂ ಮಾರಿಕೊಳ್ಳಬಾರದು. ಮಾರಿಕೊಂಡಲ್ಲಿ ಪ್ರಜಾಪ್ರಭುತ್ವದಲ್ಲಿ ಪ್ರಶ್ನೆ ಮಾಡಲು ಆಗುವುದಿಲ್ಲ. ಅದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಉಪನ್ಯಾಸಕರಾದ ರಘು ಅವರು ತಿಳಿಸಿದರು.
‘ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವ್ಯವಸ್ಥೆ ಬಗ್ಗೆ ಅತೃಪ್ತಿ, ಅಸಮಾದಾನ ವ್ಯಕ್ತಪಡಿಸುತ್ತೇವೆ. ಆದರೆ ನಮ್ಮ ತಪ್ಪುಗಳ ಆತ್ಮವಲೋಕನ ಮಾಡಿಕೊಳ್ಳುವುದನ್ನು ಮರೆಯುತ್ತೇವೆ. ಇದನ್ನು ಪ್ರತಿಯೊಬ್ಬರೂ ಯೋಚಿಸಬೇಕಿದೆ ಎಂದರು.’
‘ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಇಡೀ ವಿಶ್ವದಲ್ಲಿಯೇ ಭಾರತಕ್ಕೆ ಉತ್ತಮ ಸಂವಿಧಾನ ನೀಡಿದ್ದು, ಧ್ವನಿ ಇಲ್ಲದವರಿಗೆ ಸಂವಿಧಾನದ ಮೂಲಕ ಧ್ವನಿ ನೀಡಿದ್ದಾರೆ. ಅದನ್ನು ಸರಿಯಾಗಿ ಮತದಾನದ ಮೂಲಕ ಬಳಸಿಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಮತ ಹಕ್ಕು ಒಂದು ಸಾಧನೆ ಎಂಬುದನ್ನು ಮರೆಯಬಾರದು ಎಂದರು.’
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರೂ ಮತದಾನದ ಗುರುತಿನ ಚೀಟಿ ಪಡೆದು, ಮತಹಕ್ಕು ಚಲಾಯಿಸಬೇಕು. ಜಿಲ್ಲೆಯಲ್ಲಿ ಶೇಕಡವಾರು ಮತದಾನ ಹೆಚ್ಚಳ ಆಗಬೇಕು ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ಭವ್ಯ ಭಾರತ ನಿರ್ಮಾಣಕ್ಕೆ ಮತದಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.
ಭಾರತ ಸಂವಿಧಾನವು ಅತ್ಯುತ್ತಮ ಪ್ರಜಾಪ್ರಭುತ್ವದ ಆಶಯಗಳನ್ನು ಒಳಗೊಂಡಿದ್ದು, ಸರ್ವರ ಹಿತಾಸಕ್ತಿಯನ್ನು ಒಳಗೊಂಡಿದೆ. ಆ ನಿಟ್ಟಿನಲ್ಲಿ ಮತದಾನದ ಮಹತ್ವವನ್ನು ತಿಳಿಯುವ ಮೂಲಕ ಪ್ರತಿಯೊಬ್ಬರೂ ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಅವರು ಮಾತನಾಡಿ ಮತ ಚಲಾಯಿಸುವುದು ಅರ್ಹರ ಜವಾಬ್ದಾರಿಯಾಗಿದೆ ಎಂದರು.
ಮತಹಕ್ಕು ಚಲಾಯಿಸಿ ಮೂಲಭೂತ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು. ದೇಶದ ಅಭಿವೃದ್ಧಿಗೆ ಯುವಜನರ ಕರ್ತವ್ಯ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಮತದಾನದ ಮೂಲಕ ನಿರ್ವಹಿಸಬೇಕು ಎಂದರು.
ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರು ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು, ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆ, ಹಾಗೆಯೇ ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಮರೂರು ತಿತಿಮತಿ ಆಶ್ರಮ ಶಾಲೆಯ ವಿದ್ಯಾರ್ಥಿಗಳು ಮತದಾನದ ಮಹತ್ವ ಕುರಿತ ನೃತ್ಯ ಪ್ರದರ್ಶನ ಮಾಡಿ ಗಮನ ಸೆಳೆದರು. ಭಾರತ ಚುನಾವಣಾ ಆಯೋಗದಿಂದ ಹೊರತಂದಿರುವ ಚುನಾವಣಾ ಜಾಗೃತಿ ಗೀತೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವ ಕುರಿತು ಹೊರತರಲಾಗಿರುವ ವಿಡಿಯೋ ಪ್ರದರ್ಶನ ಮಾಡಲಾಯಿತು.
ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ, ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಕಾನೂನು ಸಲಹೆಗಾರರಾದ ಲೋಕೇಶ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ(ಪ್ರಭಾರ) ಎಂ.ಎನ್.ರವಿಶಂಕರ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಇತರರು ಇದ್ದರು.
ಬಸವರಾಜ ಬಡಿಗೇರ್ ಅವರು ಮತದಾನದ ಮಹತ್ವ ಕುರಿತು ಹಾಡು ಹಾಡಿದರು. ವಿದ್ಯಾರ್ಥಿನೀಯರು ನಾಡಗೀತೆ ಮತ್ತು ರಾಷ್ಟ್ರಗೀತೆ ಹಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಬಿ.ಎಚ್.ತಳವಾರ ನಿರೂಪಿಸಿದರು.