ಮಡಿಕೇರಿ ಜ.28 : ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಯಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಜಿ.ಕಣ್ಣನ್, ಕರ್ನಲ್ ನಾರಾಯಣ ಮೂರ್ತಿ(ನಿವೃತ್ತ), ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಪುಷ್ಪಗುಚ್ಛ ಇರಿಸಿ, ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ತಮ್ಮ ಬದುಕಿನುದ್ದಕ್ಕೂ ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆಗೆ ಪ್ರಥಮ ಆದ್ಯತೆ ನೀಡಿದ್ದರು. ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮೈಗೂಡಿಸಿಕೊಂಡಿದ್ದರು, ಅವರ ಆದರ್ಶ ಬದುಕು ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಬೇಕು ಎಂದರು.
ಯುವ ಜನರು ದೇಶವನ್ನು ಪ್ರೀತಿಸಬೇಕು. ರಾಷ್ಟ್ರ ಮೊದಲು, ನಂತರ ಉಳಿದವು ಎಂಬುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಈ ಬಗ್ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸದಾ ಹೇಳುತ್ತಿದ್ದರು. ಭಾರತ ಸೇನೆಯ ಹೆಮ್ಮೆಯ ಪುತ್ರ. ಭಾರತೀಯ ಸೇನೆಗೆ ತನ್ನದೇ ಆದ ಇತಿಹಾಸ ನಿರ್ಮಿಸಿದ ಕೀರ್ತಿ ರಾಷ್ಟ್ರದ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಿಗೆ ಸಲ್ಲುತ್ತದೆ ಎಂದರು.
ರಾಷ್ಟ್ರಕ್ಕೆ ಶಿಸ್ತು, ದೇಶ ಪ್ರೇಮ, ರಾಷ್ಟ್ರಭಕ್ತಿ ಹೆಚ್ಚಿಸುವಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶಗಳನ್ನು ಶಿಸ್ತಿನ ಜೀವನವನ್ನು ಸದಾ ಅನುಸರಿಸಬೇಕು. ಆ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಆಚರಿಸಲಾಗುತ್ತದೆ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಶಿಸ್ತಿನ ಸಿಪಾಯಿ ಆಗಿದ್ದರು, ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿ ಎಂದರು.
ಸ್ವಾತಂತ್ರ್ಯ ಭಾರತದ ಮಹಾ ದಂಡನಾಯಕರಾಗಿ ರಾಷ್ಟ್ರ ರಕ್ಷಣೆ ಹಾಗೂ ಭದ್ರತೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸೇನಾ ಕ್ಷೇತ್ರದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಮಹತ್ತರ ಸಾಧನೆ ಮಾಡಿದ್ದಾರೆ ಎಂದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಕೊಡಗು ಜಿಲ್ಲೆಯ ಸುಪುತ್ರರಾಗಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಹೆಸರು ತಂದು ಕೊಟ್ಟಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ಸ್ಮರಿಸಿದರು.
ಜಿಲ್ಲಾ ಪೊಲೀಸ್ ವಾದ್ಯ ತಂಡ ಸಿದ್ದೇಶ್ ಅವರ ನೇತೃತ್ವದಲ್ಲಿ ವೀರ ಸೇನಾನಿಗೆ ಗೌರವ ನಮನ ಸಲ್ಲಿಸಿ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಕೂಡಿಗೆ ಸೈನಿಕ ಶಾಲೆ, ಮಡಿಕೇರಿಯ ಸಂತ ಮೈಕೆಲರ ಶಾಲೆ, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ, ಬ್ಲಾಸಂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಶಸ್ತಿ ಪತ್ರ ವಿತರಣೆ; ಫೀ.ಮಾ.ಕೆ.ಎಂ.ಕಾರ್ಯಪ್ಪ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂತ ಮೈಕೆಲರ ಶಾಲೆಯ ಭೂಮಿಕ ಎನ್., ದ್ವಿತೀಯ ಸ್ಥಾನ ಪಡೆದ ಕೊಡಗು ವಿದ್ಯಾಲಯದ ಕೀರ್ತಿ ಅಯ್ಯಪ್ಪ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆನೆತ್ ರಾಯ್ ಅವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ಮಡಿಕೇರಿ ಕೊಡವ ಸಮಾಜದ ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿದೇಶಕರಾದ ಪುಟ್ಟರಾಜು, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಅಜ್ಜಿಕುಟ್ಟಿರ ಗಿರೀಶ್ ಅವರು ಸ್ವಾಗತಿಸಿದರು, ಕಡಗದಾಳು ಪ್ರೌಢಶಾಲೆಯ ಮುಖ್ಯಸ್ಥರಾದ ಅನಿತಾ ಚೋಕಿರ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ವಂದಿಸಿದರು.