ಸೋಮವಾರಪೇಟೆ,ಜ.31 : ಆಯುಷ್ ಇಲಾಖೆಯ ಮೂಲಕ ರೂ. 60ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು. ಹೋಮಿಯೋಪತಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡಿರುವ ಪ್ರಥಮ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಂಜನ್, ಯಾವುದೇ ಅಡ್ಡಪರಿಣಾಮವಿಲ್ಲದೇ ನೈಸರ್ಗಿಕ ಗಿಡಮೂಲಿಕೆಗಳಿಂದ ಚಿಕಿತ್ಸೆ ನೀಡುವ ಹೋಮಿಯೋಪತಿ ಚಿಕಿತ್ಸಾ ಪದ್ಧತಿಯ ಬಗ್ಗೆ ಜನರು ಹೆಚ್ಚಾಗಿ ತಿಳಿದುಕೊಳ್ಳಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ವಿಶ್ವಕ್ಕೆ ಪರಿಚಯಿಸುವ ಕಾರ್ಯ ಮಾಡಿದ್ದಾರೆ. ವಿಶ್ವದ 194 ದೇಶಗಳಲ್ಲಿ ಯೋಗ ಖ್ಯಾತಿಯಾಗಿದೆ. ಯೋಗ ದಿನಾಚರಣೆ ಆಚರಿಸಲ್ಪಡುತ್ತಿದೆ. ಪ್ರಾಚೀನ ಪರಂಪರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕ್ರಮವನ್ನು ಉಳಿಸುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ಆಯುಷ್ ಅಧಿಕಾರಿ ಡಾ. ರೇಣುಕಾದೇವಿ, ತಾಲೂಕು ತಹಶಿಲ್ದಾರ್ ಎಸ್.ಎನ್. ನರಗುಂದ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ಮುಖ್ಯಾಧಿಕಾರಿ ನಾಚಪ್ಪ, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಜಿ.ಪಂ.ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪಿ. ವೀರೇಂದ್ರ, ತಾ.ಪಂ. ಮಾಜಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸ್ಮಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.













