ಮಡಿಕೇರಿ ಜ.31 : ಸೋಮವಾರಪೇಟೆ ತಾಲೂಕಿನ ಮಾದ್ರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಿತು.
ಶಾಲಾ ಅಭಿವೃದ್ಧಿ ಸಮಿತಿ ಮತ್ತು ಗ್ರಾಮ ಅಭಿವೃದ್ಧಿ ಸಮಿತಿಯ ವತಿಯಿಂದ
ನಡೆದ ಕಾರ್ಯಕ್ರಮವನ್ನು ದುಂಡಳ್ಳಿ ಪಂಚಾಯತಿ ಅಧ್ಯಕ್ಷರಾದ ಪೂರ್ಣಿಮಾ ಕಿರಣ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹರಪಳ್ಳಿ ರವೀಂದ್ರ, ಶಾಲೆ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶನಿವಾರಸಂತೆ ಪೆÇಲೀಸ್ ಠಾಣೆ ವೃತ್ತ ನಿರೀಕ್ಷಕ ಪರಶಿವಮೂರ್ತಿ ಮಾತನಾಡಿ, ಹಳೆ ವಿದ್ಯಾರ್ಥಿಗಳು ಗುರುಗಳಿಗೆ ಗುರುವಂದನೆ ಸಲ್ಲಿಸುವುದು ಮುಂದಿನ ಪೀಳಿಗೆಗೆ ಆದರ್ಶವಾಗಿದೆ. ಸರ್ಕಾರಿ ಶಾಲೆಯ ಉಳಿವಿಗಾಗಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಈ.ರುದ್ರೇಗೌಡ ಮತ್ತು ಗ್ರಾಮ ಅಭಿವೃದ್ಧಿ ಸಮಿತಿಯ ಎಂ.ಡಿ.ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯೆ ಸತ್ಯವತಿ ದೇವರಾಜ್, ರಂಗಾಚಾರ್ಯ, ಪುರುಷೋತ್ತಮ್, ಸಿದ್ದೇಗೌಡ ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು.
ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮದಲ್ಲಿ ಈ ಹಿಂದೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ಬಸಪ್ಪ, ಲಲಿತ, ಅಂಗನವಾಡಿ ಶಿಕ್ಷಕಿ ಸಿದ್ದಮ್ಮ ಹಾಗೂ ಪುಟ್ಟರಾಜ, ಮಮತಾ ಅವರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಅಲ್ಲದೆ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಯಲ್ಲಿರುವ ಶಾಲೆಯ ಹಳೆಯ ವಿದ್ಯಾರ್ಥಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ಗುರುವಂದನೆಯನ್ನು ಸ್ವೀಕರಿಸಿ ಮಾತನಾಡಿದ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಉತ್ತಮ ಸರ್ಕಾರಿ ಸೇವೆಯಲ್ಲಿ ಹಾಗೂ ಖಾಸಗಿ ಕಂಪನಿಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿ ನಮಗೆ ಗೌರವವನ್ನು ತಂದುಕೊಟ್ಟಿದ್ದಾರೆ ಹಾಗೂ ಶಾಲೆಯ ಹೆಸರನ್ನು ಉಳಿಸಿದ್ದಾರೆ. ಮುಂದಿನ ವಿದ್ಯಾರ್ಥಿಗಳು ಸಹ ಇದೇ ಹಾದಿಯಲ್ಲಿ ನಡೆಯಬೇಕೆಂದು ಕಿವಿಮಾತು ಹೇಳಿದರು.
ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿಧನ ಹೊಂದಿದ ಶಿಕ್ಷಕ ವಿಜಯ್ ಅವರಿಗೆ ಹಳೆ ವಿದ್ಯಾರ್ಥಿಗಳು ಮೌನಾಚರಣೆಯ ಮೂಲಕ ಸಂತಾಪ ಸೂಚಿಸಿದರು.
ಸಭಾ ಕಾರ್ಯಕ್ರಮದ ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ಎಂ.ಎಸ್.ವೀರೇಂದ್ರ ಮಾಡಿದರು. ಶಾಲಾ ಶಿಕ್ಷಕ ಪುಟ್ಟರಾಜ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಮಮತಾ ಸರ್ವರನ್ನು ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಶೈಲೇಶ್ ನಡೆಸಿಕೊಟ್ಟರು.