ಮಡಿಕೇರಿ ಫೆ.16 : ಜಿಲ್ಲೆಯಲ್ಲಿ ಫಲಾನುಭವಿಗಳ ಆಧಾರಿತ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಆಯೋಜಿಸಲು ಸರ್ಕಾರ ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಸಮಾಜ ಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಕಂದಾಯ, ಜಿಲ್ಲಾ ಪಂಚಾಯತ್, ಸಹಕಾರ, ಬೃಹತ್ ಮತ್ತು ಸಣ್ಣ ನೀರಾವರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿವಿಧ ನಿಗಮಗಳು ಹೀಗೆ ಹಲವು ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿನ ಫಲಾನುಭವಿಗಳನ್ನು ಸಮ್ಮೇಳನಕ್ಕೆ ಆಹ್ವಾನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಬಜೆಟ್ ಅಧಿವೇಶನ ನಂತರ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಮತ್ತು ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಿಸಬೇಕಿದೆ. ಆ ನಿಟ್ಟಿನಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ಒಟ್ಟಾರೆ ಫಲಾನುಭವಿಗಳ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಇಲಾಖಾ ಅಧಿಕಾರಿಗಳು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು ಮತ್ತು ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಫಲಾನುಭವಿಗಳ ಸಮ್ಮೇಳನ ಸಂದರ್ಭದಲ್ಲಿ ಅರ್ಹರಿಗೆ ಅರಣ್ಯ ಹಕ್ಕು ಪತ್ರ ವಿತರಣೆ, ನಿವೇಶನ ಹಕ್ಕುಪತ್ರ, ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಮಾಹಿತಿ ನೀಡಿ ಐಟಿಡಿಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕಿದೆ. ಹಾಗೆಯೇ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಹರಿಗೆ ಹಕ್ಕು ಪತ್ರ ವಿತರಿಸಬಹುದಾಗಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿ ವಿರಾಜಪೇಟೆ, ಸೋಮವಾರಪೇಟೆ ಮತ್ತು ಕೊಡ್ಲಿಪೇಟೆಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆಗೆ ಸಿದ್ಧವಾಗಿದೆ. ಹಾಗೆಯೇ ಕುಶಾಲನಗರದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆಗೆ ಸಿದ್ಧವಾಗಿದೆ ಎಂದರು.
ಬಿಸಿಎಂ. ಇಲಾಖೆಯ ಅಧಿಕಾರಿ ಎನ್.ಮಂಜುನಾಥ್ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಭಾಗ್ಯಲಕ್ಷ್ಮಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮ ಅನುóಷ್ಠಾನಗೊಳಿಸಲಾಗುತ್ತಿದ್ದು, ಈ ಸಂಬಂಧ ಫಲಾನುಭವಿಗಳನ್ನು ಆಹ್ವಾನಿಸಲಾಗುವುದು ಎಂದರು. ಕಾನೂನು ಪದವೀದರರಿಗೆ ಶಿಷ್ಯ ವೇತನ ನೀಡಲಾಗುತ್ತದೆ ಎಂದರು.
ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ಮೋಹನ್ ಅವರು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸರ್ಕಾರ ಮರು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ 50 ಸಾವಿರ ಸದಸ್ಯರ ನೋಂದಣಿ ಗುರಿ ಇದ್ದು, ಜಿಲ್ಲೆಯಲ್ಲಿ 57 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದೆ ಎಂದು ಸಹಾಯಕ ನಿಬಂಧಕರಾದ ಎಂ.ಇ.ಮೋಹನ್ ಮಾಹಿತಿ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾತನಾಡಿ 65 ವಿವೇಕ ಕೊಠಡಿಗಳನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 35 ಶಾಲೆಗಳ ಕಾಮಗಾರಿಗಳು ಆರಂಭವಾಗಿ, ವಿವಿಧ ಹಂತದಲ್ಲಿದೆ ಎಂದು ತಿಳಿಸಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಸುರೇಶ್ ಭಟ್ ಅವರು ಕುಶಾಲನಗರದ ಪಶುವೈದ್ಯಕೀಯ ಆಸ್ಪತ್ರೆ ನಿರ್ಮಾಣವಾಗಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಹಾಗೆಯೇ ಸೋಮವಾರಪೇಟೆ ತಾಲ್ಲೂಕಿನ ನಾಗಾವಾರದಲ್ಲಿ ಗೋಶಾಲೆ ನಿರ್ಮಾಣಕ್ಕೆ ಚಾಲನೆ ನೀಡಬಹುದಾಗಿದೆ ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ತಿಳಿಸಿದರು.
ಹಾಗೆಯೇ ಪವರ್ ಟಿಲ್ಲರ್, ಡೀಸೆಲ್ ಪಂಪ್‍ಸೆಟ್, ಸೌಲಭ್ಯ ಕಲ್ಪಿಸಲಾಗಿರುವ ಫಲಾನುಭವಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕಾರ್ಯಪ್ಪ ಅವರು ಜೇನು ಪೆಟ್ಟಿಗೆ ಫಲಾನುಭವಿಗಳಿಗೆ ವಿತರಿಸಲಾಗಿದೆ. ಹಾಗೆಯೇ ಗ್ರೇಟರ್ ರಾಜಾಸೀಟು ಉದ್ಘಾಟನೆಗೆ ಸಿದ್ಧವಾಗಿದೆ ಎಂದು ಹೇಳಿದರು.
ಸಾಮಾಜಿಕ ಭದ್ರತಾ ಯೋಜನೆ ಕಾರ್ಯಕ್ರಮಗಳು, ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್‍ಗಳ ವಿತರಣೆ, ಕಾರ್ಮಿಕ ಇಲಾಖೆಯಿಂದ ಇ-ಶ್ರಮ್ ಯೋಜನೆಯಡಿ ಕಾರ್ಡುಗಳ ವಿತರಣೆ,
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಇತರರು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಫಲಾನುಭವಿಗಳ ಸಮ್ಮೇಳನವನ್ನು ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಕೈಜೋಡಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.








