ಮಡಿಕೇರಿ ಫೆ.17 : ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ನ್ನು ಮಂಡಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನವ ಕರ್ನಾಟಕ ನಿರ್ಮಾಣದ ಬಜೆಟ್ ನ್ನು ಮಂಡಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ತಿಳಿಸಿದ್ದಾರೆ.
ಕೊಡಗು ಜಿಲ್ಲೆಗೆ 100 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ನೀಡಿರುವುದು ಸ್ವಾಗತಾರ್ಹ. ಶಿಕ್ಷಣಕ್ಕೆ ಒತ್ತು ನೀಡಿರುವ ಬಜೆಟ್ ರಾಜ್ಯದ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದೆ. “ಹಳ್ಳಿ ಮುತ್ತು” ಯೋಜನೆಯಡಿ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲು ಮುಂದಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಆರೋಗ್ಯ ಕೇಂದ್ರಗಳಿಗೆ ವಿನೂತನ ಉಪಕರಣಗಳನ್ನು ನೀಡಲು ನಿರ್ಧರಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ 10 ಸಾವಿರ ಮಂದಿಗೆ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ. ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 10 ವಸತಿ ಶಾಲೆಗಳಲ್ಲಿ, ಶಾಲೆಗೆ ಒಂದರಂತೆ ಉತ್ಕೃಷ್ಟ ಮಟ್ಟದ ಕ್ರೀಡಾ ಸೌಲಭ್ಯವನ್ನು 10 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುತ್ತಿದೆ. ಒಟ್ಟಿನಲ್ಲಿ ಸರ್ವ ಜನರ ವಿಕಾಸ ಮತ್ತು ಅಭ್ಯುದಯಕ್ಕೆ ನೆರವಾಗಬಲ್ಲ ಬಜೆಟ್ ಎನ್ನುವುದು ಸಾಬೀತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.









