ಕುಶಾಲನಗರ ಫೆ.20 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದಿಂದ ಸಮುದಾಯ ಬಾಂಧವರಿಗಾಗಿ ಕ್ರೀಡಾ ಮಹೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.26 ರಂದು ಕುಶಾಲನಗರದ ಸರಕಾರಿ ಪ.ಪೂ.ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ವಿವಿಧ ಮಾದರಿಯ ಕ್ರೀಡೆಗಳು ನಡೆಯಲಿದ್ದ ಪ್ರಮುಖವಾಗಿ ಕ್ರಿಕೆಟ್ ಮತ್ತು ಷಟಲ್ ಕಾಕ್ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹಾಗೂ ಕುಶಾಲನಗರ ಡಿವೈಎಸ್ಪಿ ಗಂಗಾಧರಪ್ಪ ಅವರು ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಕ್ಷಿಕ್ ರಾಜ್ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಲಿದೆ. ಸಮುದಾಯದ ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಾರ್ಚ್ 3 ರಂದು ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಎರಡೂ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಅವರು ಕೋರಿದರು.
ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ ಮಾತನಾಡಿ, ಕ್ರಿಕೆಟ್ ಮತ್ತು ಷಟಲ್ ಪಂದ್ಯಾಟಗಳಿಗೆ ನಿಗದಿತ ದಿನಾಂಕದ ಮುಂಚಿತವಾಗಿ ನೋಂದಾಯಿಸಿಕೊಳ್ಳಲು ಸೂಚಿಸಿದರು.
ಗೋಷ್ಠಿಯಲ್ಲಿ ಮಹಾಸಭಾದ ಜಿಲ್ಲಾ ಖಜಾಂಚಿ ಎಚ್.ಪಿ.ಉದಯಕುಮಾರ್, ಕುಶಾಲನಗರ ತಾಲೂಕು ಅಧ್ಯಕ್ಷ ಮಧುಸೂದನ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಬಸವರಾಜು ಇದ್ದರು.










