ಮಡಿಕೇರಿ ಮಾ.6 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ, ಸಾಂಸ್ಕೃತಿಕ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ. 8ರಂದು ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸುವರ್ಣ ಮಹೋತ್ಸವ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿಯ ರೂಪಶ್ರೀ ಸತೀಶ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೂಡಿಗೆ ಕ್ರೀಡಾ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ, ಸೋಮವಾರಪೇಟೆ ಅಬಕಾರಿ ನಿರೀಕ್ಷಕರಾದ ಚೈತ್ರಾ, ಕುಶಾಲನಗರದ ಪ್ರಿಯಾಂಕ ಗಂಗಾಧರಪ್ಪ, ಕಾರ್ಯಕ್ರಮ ಸಂಚಾಲಕಿ ವನಿತಾ ಚಂದ್ರಮೋಹನ್ ಉಪಸ್ಥಿತರಿರಲಿದ್ದಾರೆ. ಪಾರಂಪರಿಕ ಆರೋಗ್ಯ ರಕ್ಷಣೆ ವಿಷಯದ ಬಗ್ಗೆ ಶಿವಮೊಗ್ಗದ ನಾಟಿವೈದ್ಯೆ ಸುಮನಾ ಮಳಲಗದ್ದೆ ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಪತ್ರಕರ್ತರ ಕುಟುಂಬಸ್ತರು, ಭಜನಾ ಮಂಡಳಿ, ಕೊಡವ ಮತ್ತು ಗೌಡ ಸಮಾಜದ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದೇ ವೇಳೆ ಸಭಿಕರಿಗಾಗಿ ವಿವಿಧ ಮನೋರಂಜನಾ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ.
ಮಧ್ಯಾಹ್ನ ನಂತರ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೊತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಿತಿ ಮಹಾ ಪೋಷಕ ಜಿ. ರಾಜೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು,
ಕುಶಾಲನಗರ ಪುರಸಭೆ ಅಧ್ಯಕ್ಷ ಬಿ. ಜೈವರ್ಧನ್, ಡಿವೈಎಸ್‌ಪಿ ಗಂಗಾಧರಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ
ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕಾರ್ಯಕ್ರಮ ಸಂಚಾಲಕರಾದ ವನಿತಾ ಚಂದ್ರಮೋಹನ್, ಸಂಘದ ತಾಲೂಕು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಾದ ಬಿ.ಆರ್. ಸವಿತಾ ರೈ, ಸುಮತಿ ಶೆಟ್ಟಿ, ಸುಮನಾ ಮಳಲಗದ್ದೆ, ಐನಮಂಡ ಲೀಲಾಗಣಪತಿ, ಸುನಿತಾ ಮೈಕಲ್, ಕರಕರನ ಬೀನಾ, ಶಾಂತ ಶ್ರೀಪತಿ, ಗೌರಮ್ಮ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









