ಮಡಿಕೇರಿ ಮಾ.13 : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೆ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಧಾರ್ಮಿಕ ಭಾವನೆಗಳನ್ನು ಕೆಣಕಿ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ತಾ.ಪಂ ಮಾಜಿ ಸದಸ್ಯ ಕೆ.ಐ.ಮಹಮ್ಮದ್ ರಫೀಕ್, ಆಜಾನ್ ಕುರಿತು ನೀಡಿರುವ ಹೇಳಿಕೆ ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಮೂಡಿಸಿ ರಾಜಕೀಯ ಲಾಭ ಮಾಡಿಕೊಳ್ಳುವ ತಂತ್ರಗಾರಿಕೆಯನ್ನು ಈಶ್ವರಪ್ಪ ಅವರು ಕರಗತ ಮಾಡಿಕೊಂಡಿದ್ದಾರೆ. ಚುನಾವಣಾ ಪ್ರಚಾರಕ್ಕೆ ಹೋದಲೆಲ್ಲ ಮುಸಲ್ಮಾನರ ಆಜಾನ್ ಕುರಿತು ಕೀಳಾಗಿ ಮಾತನಾಡಿದ್ದಾರೆ. ನಾವು ನಂಬಿರುವ ದೇವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಅಲ್ಪಸಂಖ್ಯಾತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಆಡಳಿತ ಪಕ್ಷ ತಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಚುನಾವಣೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇದು ಸಾಧ್ಯವಾಗದೆ ಸೋಲಿನ ಹತಾಶ ಮನೋಭಾವದಲ್ಲಿರುವ ಈಶ್ವರಪ್ಪ ಅವರು ಆಜಾನ್ ನ್ನು ವ್ಯಂಗ್ಯ ಮಾಡಿ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಇಂದು ಮತದಾರರು ಪ್ರಜ್ಞಾವಂತರಾಗಿದ್ದು, ಸಮಾಜವನ್ನು ಒಡೆದು ಆಳುವವರಿಗೆ ಈ ಬಾರಿ ಮತ ನೀಡಲ್ಲ ಎಂದು ತಿಳಿಸಿದ್ದಾರೆ.
ಪ್ರತಿಯೊಂದು ಧರ್ಮವನ್ನು ಗೌರವಿಸಿ ಎಂದು ದೇಶದ ಪ್ರಧಾನಮಂತ್ರಿಗಳು ನೀಡಿದ ಸಲಹೆಯನ್ನೇ ಗೌರವಿಸಲಾಗದ ಈಶ್ವರಪ್ಪ ಅವರು, ಇತರ ಧರ್ಮೀಯರ ಭಾವನೆಗಳಿಗೆ ಗೌರವ ತೋರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಎಂ.ಎ.ಉಸ್ಮಾನ್ ಹಾಗೂ ಕೆ.ಐ.ಮಹಮ್ಮದ್ ರಫೀಕ್ ರಾಜಕೀಯದಲ್ಲಿ ಧರ್ಮವನ್ನು ಬೆರೆಸಿ ಪ್ರಚೋದನಾಕಾರಿ ಭಾಷಣಗಳನ್ನು ಮಾಡುವುದನ್ನು ಚುನಾವಣಾ ಆಯೋಗ ನಿಯಂತ್ರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಈಶ್ವರಪ್ಪ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.










