ಮಡಿಕೇರಿ ಮಾ.14 : ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಆನೆಹಳ್ಳದಿಂದ ದಬ್ಬಡ್ಕದ ವರೆಗಿನ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ವಿನಾಕಾರಣ ಕಾಮಗಾರಿ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು ರಸ್ತೆ ಕಾಮಗಾರಿ ನಡೆಸುವ ಸಂದರ್ಭ ಗ್ರಾಮಸ್ಥರು ಹಾಗೂ ಸ್ಥಳೀಯ ಯುವಕರು ಸ್ಥಳದಲ್ಲೇ ಹಾಜರಿದ್ದು, ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಂಡಿದ್ದಾರೆ. ಹೀಗಿದ್ದರೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯ ಗುಣಮಟ್ಟದ ಕುರಿತಂತೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು ಹಾಸ್ಯಸ್ಪದ ಎಂದರು.
ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ನವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದೊಂದು ಚುನಾವಣಾ ಗಿಮಿಕ್ ಅಷ್ಟೆ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಯಾರನ್ನೋ ಮೆಚ್ಚಿಸುವ ಸಲುವಾಗಿ ದುರುದ್ದೇಶಪೂರಿತವಾಗಿ ಕಾಮಗಾರಿ ಬಗ್ಗೆ ಆರೋಪ ಮಾಡಲಾಗುತ್ತಿದೆ. ತಪ್ಪುಗಳಾದಾಗ ಅವುಗಳನ್ನು ಸರಿಪಡಿಸಿಕೊಳ್ಳಬಹುದು, ಆದರೆ ಪ್ರಚಾರಕ್ಕಾಗಿ ಈ ರೀತಿ ಮಾಡುವುದು ಸಣ್ಣತನದ ಪ್ರವೃತ್ತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಉಪಾಧ್ಯಯ, ಪಯಶ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತೇಶ್ವರ, ನಿರ್ದೇಶಕ ಸಣ್ಣಮನೆ ದಿನೇಶ್, ಗ್ರಾ.ಪಂ ಸದಸ್ಯರಾದ ರಮೇಶ್, ಉರುಬೈಲು ವಸಂತ, ಪಕ್ಷದ ಬೂತ್ ಸಮಿತಿ ಅಧ್ಯಕ್ಷ ನಡುಬೆಟ್ಟು ಪ್ರಶಾಂತ್ ಹಾಗೂ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
ಇದೇ ಸಂದರ್ಭ ಚೆಂಬು ಗ್ರಾ.ಪಂ ವ್ಯಾಪ್ತಿಯ ದಬ್ಬಡ್ಕದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರೂ.1 ಕೋಟಿ ವೆಚ್ಚದ ಶುದ್ಧ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.