ಮಡಿಕೇರಿ ಮಾ.17 : ಪರಿಶಿಷ್ಟ ಜಾತಿ ಮತ್ತು ಪಂಗಡದ ಹೆಸರಿನಲ್ಲಿ ನಕಲಿ ಪ್ರಮಾಣ ಪತ್ರ ಪಡೆದು ಸರಕಾರಿ ಸೌಲಭ್ಯ ಪಡೆಯುತ್ತಿರುವ ವಂಚಕರನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಜೆ.ಆರ್.ಪಾಲಾಕ್ಷ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಹಾವಳಿ ಹೆಚ್ಚಾಗುತ್ತಿದ್ದು, ಪರಿಶಿಷ್ಟರ ಮೀಸಲಾತಿ ಸೌಲಭ್ಯವನ್ನು ವಂಚಕರು ಪಡೆದುಕೊಳ್ಳುತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಲಕ್ನಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿಗೆ ಸೇರಿದವರೆಂದು ಸುಳ್ಳು ಜಾತಿ ದೃಢೀಕರಣ ಪತ್ರ ಪಡೆದು ಸರ್ಕಾರಿ ಯೋಜನೆಯಡಿ ಮನೆಯ ಪಕ್ಕದಲ್ಲೇ ರಸ್ತೆ ಮಾಡಿಸಿಕೊಂಡಿದ್ದಾರೆ. ಸಣ್ಣ ಕೈಗಾರಿಕಾ ಇಲಾಖೆಯಿಂದ ಹಾಗೂ ಅಂಬೇಡ್ಕರ್ ನಿಗಮದಿಂದ ಸಾಲ ಸೌಲಭ್ಯ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ.
ಅಲ್ಲದೆ ಕೊಡ್ಲಿಪೇಟೆಯ ವ್ಯಕ್ತಿಯೊಬ್ಬರು ಸುಳ್ಳು ದೃಢೀಕರಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಅಲ್ಲಿನ ಗ್ರಾಮಸ್ಥರು ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಜಿಲ್ಲಾಧಿಕಾರಿಗಳು ತಕ್ಷಣ ಸುಳ್ಳು ಜಾತಿ ಪ್ರಮಾಣ ಪತ್ರದ ದಂಧೆಕೋರರನ್ನು ಪತ್ತೆಮಾಡಿ ನೈಜ ಪರಿಶಿಷ್ಟರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.
ಇತ್ತೀಚೆಗೆ ಗೋಣಿಕೊಪ್ಪದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಸಂದರ್ಭ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಾಲಾಕ್ಷ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಸ್.ವಿರೇಂದ್ರ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಜೆ.ಎಲ್.ಜನಾರ್ಧನ್ ಹಾಗೂ ಹಾಸನ ಜಿಲ್ಲಾ ಸಂಚಾಲಕ ಹೆಚ್.ಕೆ.ಜಗದೀಶ್ ಉಪಸ್ಥಿತರಿದ್ದರು.