ಮಡಿಕೇರಿ ಮಾ.21 : ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನವನ್ನು ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಗೆ ನೀಡಿದೆ. ಆದರೆ ಬಿಜೆಪಿ ಪದಾಧಿಕಾರಿಯಾಗಿದ್ದ ಜೋಕಿಂ ರೋಡ್ರಿಗಸ್ ಅವರು ಸ್ವಹಿತಾಸಕ್ತಿಗೋಸ್ಕರ ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷ ಪಿ.ಎಂ.ಹಕೀಂ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಪದಾಧಿಕಾರಿಯಾಗಿದ್ದ ಜೋಕಿಂ ರೋಡ್ರಿಗಸ್ ಅವರು ಸರ್ಕಾರದಿಂದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಿಲ್ಲವೆಂದು ಟೀಕೆ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ಕಳೆದ ಐದು ವರ್ಷಗಳ ಅವಧಿಯಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚರ್ಚ್‍ಗಳ ಸಮುದಾಯ ಭವನ ನಿರ್ಮಾಣ, ಸ್ಮಶಾನ ಅಭಿವೃದ್ಧಿ ಮೊದಲಾದ ಕಾರ್ಯಗಳಿಗೆ 10 ಕೋಟಿಗೂ ಹೆಚ್ಚಿನ ಅನುದಾನವನ್ನು ಶಾಸಕ ಕೆ.ಜಿ.ಬೋಪಯ್ಯ ಅವರ ಶಿಫಾರಸ್ಸಿನ ಮೇಲೆ ಒದಗಿಸಲಾಗಿದೆ.
ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದ ಸಂದರ್ಭ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಲ್ಲದೆ, ಅದರ ಮೂಲಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಾ ಬಂದಿದೆ. ಸಿದ್ದಾಪುರ, ಅಮ್ಮತ್ತಿ, ವಿರಾಜಪೇಟೆ ಚರ್ಚ್‍ಗಳ ಸಮುದಾಯ ಭವನಕ್ಕೆ ತಲಾ 50 ಲಕ್ಷ ರೂ.ಗಳನ್ನು ಒದಗಿಸಿದ್ದು, ಇದೇ ರೀತಿ ಹಲವೆಡೆಗಳ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸರ್ಕಾರ ಅನುದಾನವನ್ನು ಒದಗಿಸಿದೆಯೆಂದು ತಿಳಿಸಿದ ಹಕೀಂ ಅಗತ್ಯ ದಾಖಲೆಗಳನ್ನು ಒದಗಿಸಿದರು.
ಜೋಕಿಂ ರೋಡ್ರಿಗಸ್ ಅವರು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭ ಮಾಡಿರುವ ಕಾರ್ಯ ಎಲ್ಲರಿಗೂ ತಿಳಿದಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಕ್ರಿಶ್ಚಿಯನ್ ಸಮುದಾಯ ಸೂಕ್ಷ್ಮವಾಗಿ ಗಮನಿಸುತ್ತಿದೆಯೆಂದು ತಿಳಿಸಿದ ಹಕೀಂ, ಬಿಜೆಪಿ ಪಕ್ಷ ಯಾರನ್ನೂ ಇಲ್ಲೆ ಇರುವಂತೆ ಬಲವಂತ ಮಾಡುವುದಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಪಿ.ಎಸ್.ರೆಬೆಲ್ಲೋ, ಪ್ರಧಾನ ಕಾರ್ಯದರ್ಶಿ ಬಿ.ಹೆಚ್. ಮುಸ್ತಫ, ವಿರಾಜಪೇಟೆ ತಾಲ್ಲೂಕು ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಸುಭಾಷ್ ಮ್ಯಾಥ್ಯು ಹಾಗೂ ಉಪಾಧ್ಯಕ್ಷ ಮೆಲ್ವಿನ್ ಜೋಸೆಫ್ ಉಪಸ್ಥಿತರಿದ್ದರು.












