ಮಡಿಕೇರಿ ಮಾ.24 : ಮಡಿಕೇರಿ ಕೊಡವ ಸಮಾಜದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪುತ್ಥಳಿಯನ್ನು ಮಾ.31 ರಂದು ಅನಾವರಣಗೊಳಿಸಲಾಗುತ್ತಿದೆ.
ವಿಶ್ವ ವಿಖ್ಯಾತರಾಗಿರುವ ಜನರಲ್ ತಿಮ್ಮಯ್ಯ ಅವರ ಹೆಸರಿನಲ್ಲೇ ಶಾಲೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಪದ್ಮಭೂಷಣ ತಿಮ್ಮಯ್ಯ ಅವರ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಈಗಾಗಲೇ ಪುತ್ಥಳಿ ಸಿದ್ಧಗೊಂಡಿದ್ದು, ಶಾಲಾ ಆವರಣದಲ್ಲಿ ಅಳವಡಿಸಲಾಗುತ್ತಿದೆ. ಪ್ರಸಿದ್ಧ ಶಿಲ್ಪಿ, ಮೈಸೂರಿನ ಅರುಣ್ ಯೋಗಿರಾಜ್ ಅವರು ಆಕರ್ಷಕ ಪುತ್ಥಳಿಯನ್ನು ಕೆತ್ತನೆ ಮಾಡಿದ್ದಾರೆ. ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಮಡಿಕೇರಿ ಕೊಡವ ಸಮಾಜ, ಶಾಲಾ ಆಡಳಿತ ಮಂಡಳಿ, ಶಿಕ್ಷಕವೃಂದ, ಪೋಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ದೇಣಿಗೆ ನೀಡಿ ಸಹಕರಿಸಿದ್ದಾರೆ.
::: ಪುತ್ಥಳಿ ಅನಾವರಣ :::
ಮಾರ್ಚ್ 31 ರಂದು ಜನರಲ್ ತಿಮ್ಮಯ್ಯ ಅವರ 117ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುತ್ಥಳಿ ಅನಾವರಣಗೊಳ್ಳಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಏರ್‍ಮಾರ್ಷಲ್ ನಂದಾ ಕಾರ್ಯಪ್ಪ ಅವರು ಪುತ್ಥಳಿಯನ್ನು ಅನಾವರಣಗೊಳಿಸಲಿದ್ದು, ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.