ಮಡಿಕೇರಿ ಮಾ.25 : ವಿಧಾನಸಭಾ ಚುನಾವಣೆಯಲ್ಲಿ ಧರ್ಮಾಧರಿತ ರಾಜಕಾರಣದ ಮೂಲಕ ಲಾಭ ಮಾಡಿಕೊಳ್ಳುವ ದುರುದ್ದೇಶದಿಂದ ರಾಜ್ಯ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಂಡು ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿಗಳು ಒಕ್ಕಲಿಗ ಮತ್ತು ವೀರಶೈವ ಲಿಂಗಾಯತರಿಗೆ ಶೇ.2ರಷ್ಟು ಮಿಸಲಾತಿ ಹೆಚ್ಚಳ ಮಾಡಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಅಲ್ಪಸಂಖ್ಯಾತರಿಗೆ 2ಬಿ ಯಲ್ಲಿರುವ ಶೇ.4 ರಷ್ಟ ಮೀಸಲಾತಿಯನ್ನು ರದ್ದು ಪಡಿಸಿ ವಂಚನೆ ಮಾಡಿದ್ದಾರೆ ಎಂದು ಟೀಕಿಸಿದರು.
ಸರ್ಕಾರ ತಕ್ಷಣ ಈ ನಿರ್ಣಯವನ್ನು ಹಿಂಪಡೆಯದಿದ್ದಲ್ಲಿ ಕಾನೂನಾತ್ಮಕ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶ್ರೀನಿರ್ಮಲಾನಂದನಾಥ ಸ್ವಾಮಿಜಿ ಅವರ ಕುರಿತು ಮಾತನಾಡುವ ನೈತಿಕತೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗಿಲ್ಲ. ಕಲಾವಿದ ಎಂದು ಹೇಳಿಕೊಳ್ಳುವ ಅವರು ಒಂದು ಪಕ್ಷದ ವಕ್ತಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗಣೇಶ್ ಟೀಕಿಸಿದರು.
ಜೆಡಿಎಸ್‍ನ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಸುಮಾರು 20 ಬಸ್‍ಗಳಲ್ಲಿ ಕಾರ್ಯಕರ್ತರು ತೆರಳಲಿದ್ದಾರೆ ಎಂದರು.
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ಬಿಜೆಪಿ ಸರ್ಕಾರ ಮತಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಸಮುದಾಯದ ಧಾರ್ಮಿಕ ವಿಚಾರಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರು ಬೀದಿಗಿಳಿದು ಹೋರಾಟ ನಡೆಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್ ಮೌರ್ಯ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೀಲಾಶೇಷಮ್ಮ ಹಾಗೂ ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನೀಲ್ ಉಪಸ್ಥಿತರಿದ್ದರು.









