ಮಡಿಕೇರಿ ಮಾ.26 : ನಿರಂತರವಾಗಿ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಲೇ ಬರುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ಇದೀಗ ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದು ಮಾಡುವ ಮೂಲಕ ದೊಡ್ಡ ಅನ್ಯಾಯವನ್ನು ಮಾಡಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಎಲ್ಲಾ ಸಮುದಾಯದವರಿಗೂ ಮೀಸಲಾತಿಯನ್ನು ನೀಡಲಿ, ನಮ್ಮ ಆಕ್ಷೇಪಣೆ ಇಲ್ಲ. ಆದರೆ ಸಂವಿಧಾನಾತ್ಮಕವಾಗಿ ಮುಸಲ್ಮಾನರಿಗಾಗಿ ಮೀಸಲಿಟ್ಟ ಮೀಸಲಾತಿಯನ್ನು ಕಸಿದುಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರನ್ನೇ ಗುರಿ ಮಾಡಿಕೊಂಡು ನಿಯಮಗಳನ್ನು ಜಾರಿಗೆ ತರಲಾಗಿದೆ. ಅಲ್ಲದೆ ವಿನಾಕಾರಣ ವಿವಾದಗಳನ್ನು ಸೃಷ್ಟಿಸಿ ಜನರ ಹಾದಿ ತಪ್ಪಿಸುವ ಯತ್ನ ಮಾಡಲಾಗಿದೆ. ಇದೀಗ ಮುಸಲ್ಮಾನರ ಮೀಸಲಾತಿಯನ್ನೇ ಕಸಿದುಕೊಳ್ಳುವ ಮೂಲಕ ದ್ವೇಷ ರಾಜಕಾರಣವನ್ನು ಬಹಿರಂಗ ಪಡಿಸಿದೆ. ಅಭಿವೃದ್ಧಿ ಪರ ಚಿಂತನೆಯಿಂದ ಜನರ ಹೃದಯ ಗೆಲ್ಲಲಾಗದ ಸರ್ಕಾರ ಭಾವನಾತ್ಮಕವಾಗಿ ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸಮಾಜದಲ್ಲಿ ಒಡಕು ಮೂಡಿಸಿ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವ ತಂತ್ರಗಾರಿಕೆಯಲ್ಲಿ ತೊಡಗಿದೆ.
ಮುಸಲ್ಮಾನರ ಮೀಸಲಾತಿಯನ್ನು ಕಿತ್ತು ನಮಗೆ ಕೊಡಿ ಎಂದು ಯಾವ ಸಮುದಾಯದವರೂ ಕೇಳಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಾಣತನವನ್ನು ಪ್ರದರ್ಶಿಸಲು ಮುಂದಾಗಿದೆ. ಪ್ರೀತಿ, ವಿಶ್ವಾಸ, ಸೌಹಾರ್ಧತೆಗೆ ಹೆಸರಾಗಿರುವ ಕರ್ನಾಟಕದಲ್ಲಿ ದ್ವೇಷದ ವಿಷಬೀಜ ಬಿತ್ತಲಾಗುತ್ತಿದೆ. ಮುಸಲ್ಮಾನರನ್ನು ಗುರಿ ಮಾಡಿ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಕಲೀಲ್ ಬಾಷ ಆರೋಪಿಸಿದ್ದಾರೆ.
ತಕ್ಷಣ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಮುಸಲ್ಮಾನರ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಿರುವ ಅವರು, ತಪ್ಪಿದಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
:::: ಪ್ರಜಾಪ್ರಭುತ್ವಕ್ಕೆ ದ್ರೋಹ :::
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ನಾಯಕರನ್ನು ರಾಜಕೀಯವಾಗಿ ಎದುರಿಸಲಾಗದೆ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ದ್ರೋಹವಾಗಿದೆ ಎಂದು ಕಲೀಲ್ ಬಾಷ ಆರೋಪಿಸಿದ್ದಾರೆ.
ಅಪರಾಧ ಪ್ರಕರಣಗಳನ್ನು ಮಾಡಿ ದೇಶ ಬಿಟ್ಟವರನ್ನು ಬಂಧಿಸಲಾಗದ ಸರ್ಕಾರ ಜನಸಾಮಾನ್ಯರ ಪರವಾಗಿ ಮಾತನಾಡಿದ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿರುವುದು ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.










