ಮಡಿಕೇರಿ ಏ.1 : ವಿಧಾನಸಭೆ ಚುನಾವಣೆ ಸಂಬಂಧ ಸಂಭಾವ್ಯ ಅಭ್ಯರ್ಥಿಗಳು, ಅಭ್ಯರ್ಥಿಗಳು ಅಥವಾ ಸ್ವತಂತ್ರ ಸ್ಪರ್ಧಿಗಳು ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ‘ವಿಷಯ ಆಧಾರಿತ’ (ಕಂಟೆಂಟ್) ಜಾಹೀರಾತು ಪ್ರಕಟಿಸುವವರು ಮಾಧ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿ (ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ಪಷ್ಟ ಪಡಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರ ಜೊತೆ ನಡೆದ ‘ಸಂವಾದ/ ಚರ್ಚಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್, ಟೆಲಿಗ್ರಾಂ, ವಾಟ್ಸ್‍ಆಫ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ವಿಷಯಾಧಾರಿತ(ಕಂಟೆಂಟ್) ಜಾಹೀರಾತು ಪ್ರಸಾರ ಮಾಡುವ ಮೊದಲು ನಗರದ ಜಿಲ್ಲಾಡಳಿತ ಭವನದ ಮೂರನೇ ಮಹಡಿಯಲ್ಲಿರುವ ‘ಎಂಸಿಎಂಸಿ’ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಪಕ್ಷದ ಚಿಹ್ನೆ ಬಳಸಿ ಜಾಹೀರಾತು ಪ್ರಚಾರ ಮಾಡಬೇಕಾದರೆ ಪೂರ್ವ ಅನುಮತಿ ಪಡೆಯಬೇಕಿದೆ. ಇದು ಸಾಮಾಜಿಕ ಮಾಧ್ಯಮಗಳಿಗೂ ಅನ್ವಯವಾಗಲಿದೆ ಎಂದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಚಟುವಟಿಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಜಿಲ್ಲೆಯ ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ವಾಹನ ತಪಾಸಣೆ ಮಾಡಲಾಗುತ್ತಿದೆ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಮತ್ತಿತರ ಅಧಿಕಾರಿಗಳು ಇದ್ದರು.