ಮಡಿಕೇರಿ ಏ.14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ‘ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಇತರರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ‘ಶಿಕ್ಷಣ ಪ್ರಬಲ ಮತ್ತು ಪರಿಣಾಮಕಾರಿ ಅಸ್ತ್ರ’ ಎಂಬುದನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಒತ್ತಿ ಹೇಳಿದ್ದಾರೆ ಎಂದರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಮಾದರಿ ಹಾಗೂ ಅತ್ಯಂತ ಶ್ರೇಷ್ಠ ಸಂವಿಧಾನನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದಾರೆ. ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದು ಶೇಖರ್ ಅವರು ನುಡಿದರು.
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವ ರತ್ನ, ವಿಶ್ವಜ್ಞಾನಿ, ಸಂವಿಧಾನ ತಜ್ಞ, ಜ್ಞಾನದ ಸಂಕೇತ ಎಂಬುದನ್ನು ಮರೆಯುವಂತಿಲ್ಲ. ಆ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಹೇಳಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.









