ಮಡಿಕೇರಿ ಏ.17 : ಪಕ್ಷೇತರ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಗರಗಂದೂರು ಗ್ರಾಮದ ಜಿ.ಜಿ.ಹೇಮಂತ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಹೇಮಂತ್ ಕುಮಾರ್ ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿರುವ ಇವರು ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂದರು. ಕಳೆದ 30 ವರ್ಷಗಳಿಂದ ಬಿಜೆಪಿಯ ಪ್ರಮಾಣಿಕ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆದರೆ ಬಿಜೆಪಿಯಲ್ಲಿ ನೈಜ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಆದ್ದರಿಂದ ಮನನೊಂದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಮಂತ್ ಕುಮಾರ್ ಸ್ಪಷ್ಟಪಡಿಸಿದರು.









