ಮಡಿಕೇರಿ ಏ.20 : ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟಾಗಿ 44.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆಯೆಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಅವಧಿಯಲ್ಲಿ ನಗದು ಸೇರಿದಂತೆ 2.16 ಲಕ್ಷ ರೂ. ಮೌಲ್ಯದ ಗಾಂಜಾ, ಚರಸ್, ಎಂಡಿಎಂಎಗಳನ್ನು ವಶಪಡಿಸಿಕೊಳ್ಳಲಾಗಿದೆಯೆಂದು ತಿಳಿಸಿದರು.
ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯ ಆರು ಮಂದಿಯನ್ನು ಗಡಿಪಾರು ಮಾಡಲಾಗಿದೆಯೆಂದು ತಿಳಿಸಿದರು.
::: ದಾಖಲೆ ರಹಿತ ಹಣ ವಶ :::
ಜಿಲ್ಲಾ ವ್ಯಾಪ್ತಿಯಲ್ಲಿ ಅಗತ್ಯ ದಾಖಲೆ ಇಲ್ಲದ 25.52 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವಿಚಾರಣೆಯ ಬಳಿಕ 17.20 ಲಕ್ಷ ರೂ.ಗಳನ್ನು ಹಿಂದಕ್ಕೆ ನಿಡಲಾಗಿದ್ದು, ಉಳಿದ ಮೊತ್ತಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆಯೆಂದು ಹೇಳಿದರು.
ಸೂಕ್ತ ದಾಖಲೆ, ಕಾರಣಗಳಿಲ್ಲದೆ ಸಾಗಿಸಲಾಗುತ್ತಿದ್ದ 1.50 ಲಕ್ಷ ರೂ. ಮೌಲ್ಯದ ಸೀರೆಗಳನ್ನೂ ವಶಪಡಿಸಿಕೊಳ್ಳಲಾಗಿದೆಯೆಂದು ತಿಳಿಸಿದರು.








