ಮಡಿಕೇರಿ ಏ.24 : ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ವತಿಯಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕ ಕಾಲದಲ್ಲಿ ಏ.25 ಮತ್ತು 26 ರಂದು ವಿಶೇಷ ಮಹಾಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎರಡು ದಿನಗಳು ಕೊಡಗಿನಾದ್ಯಂತ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅಭಿಯಾನ ನಡೆಯಲಿದ್ದು, ಪತ್ರಿಕಾಗೋಷ್ಠಿಗಳು, ಹೋಬಳಿ ಹಾಗೂ ತಾಲೂಕು ಕೇಂದ್ರಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಭೆಗಳು, ಮನೆ ಮನೆ ಸಂಪರ್ಕ ಮೂಲಕ ಮತ ಯಾಚನೆ, ಪ್ರಮುಖ ಕಾರ್ಯಕರ್ತರು, ಸಮುದಾಯ ಮುಖಂಡರು, ಫಲಾನಭವಿಗಳು ಹಾಗೂ ಪ್ರಮುಖರೊಂದಿಗೆ ಸಭೆ, ಸ್ಥಳೀಯ ಪ್ರತಿಮೆಗಳಿಗೆ ಮಾಲಾರ್ಪಣೆ, ದೇವಾಲಯ, ಮಠ, ಮಂದಿರಗಳಿಗೆ ಭೇಟಿ, ಬೀದಿ, ಪ್ರಮುಖ ಸ್ಥಳಗಳು ಮತ್ತು ಆಯಾ ಕಟ್ಟಿನ ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಈ ವಿಶೇಷ ಮಹಾ ಅಭಿಯಾನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೆ.ಅಣ್ಣಾಮಲೈ ಸೇರಿದಂತೆ ರಾಷ್ಟ್ರೀಯ ನಾಯಕರು ಹಾಗೂ 98 ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಅಲ್ಲದೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸಿ.ಟಿ.ರವಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಸದಾನಂದ ಗೌಡ ಸೇರಿದಂತೆ ರಾಜ್ಯದ ನಾಯಕರು, ಜಿ.ಪಂ ಮತ್ತು ತಾಲೂಕು ಪಂ. ಅಧ್ಯಕ್ಷರು ಮತ್ತು ಮಾಜಿ ಸದಸ್ಯರು, ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಹೇಶ್ ಜೈನಿ ವ್ಯಕ್ತಪಡಿಸಿದ್ದಾರೆ.









