ಮಡಿಕೇರಿ ಏ.28 : ಕಳೆದ ಐದು ವರ್ಷಗಳ ಅವಧಿಯಲ್ಲಿ ಶಾಸಕರುಗಳಾಗಿ ಜನರ ಸಂಕಷ್ಟಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರುವ ಕಾರಣ ಈ ಬಾರಿಯ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರ್ರೆಸ್ ಹೊರಗಿನ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದ್ದು, ಇಂತಹ ‘ಪಿಕ್ನಿಕ್’ ರಾಜಕಾರಣಿಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಸಾಧ್ಯವಿಲ್ಲ. ಹಣ ಬಲದ ರಾಜಕಾರಣದ ಎದುರು ನಾವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿರುವುದಾಗಿ ಹೇಳಿದರು.
ವಿಶ್ವ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನಂತೆ ತಮ್ಮ ಆಡಳಿತದ ಅವಧಿಯಲ್ಲಿ ‘ಸೇವೆಯೊಂದಿಗೆ ಸಂಘಟನೆ’ ಮಾಡಲಾಗಿದೆ. ಈ ಬಾರಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಗೆಲುವನ್ನು ದಾಖಲಿಸಲಿದೆ ಎಂದರು.
ಪ್ರಾಕೃತಿಕ ವಿಕೋಪ ಮತ್ತು ಕೋವಿಡ್ ಸಂದರ್ಭ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಕಾಂಗ್ರೆಸ್ ಮಾಡಿಲ್ಲ ಎಂದು ಟೀಕಿಸಿದರು. ಬಿಜೆಪಿಯಿಂದ ಶೀಘ್ರವೇ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ ಅವರು, ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ 18 ಗ್ರಾಮಗಳನ್ನು ಒಳಗೊಂಡ ‘ಟೂರಿಸ್ಟ್ ಕಾರಿಡಾರ್’ ಮಾಡುವ ಚಿಂತನೆ ತಮ್ಮದಾಗಿದೆ. ಈ ಯೋಜನೆಯ ಮೂಲಕ ಗ್ರಾಮಗಳನ್ನು ಸಂಪರ್ಕಿಸುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡಲಾಗುವುದೆಂದು ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‍ಸಿ-ಎಸ್‍ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಿಸಲಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಎಲ್ಲಾ ಸಂದರ್ಭದಲ್ಲೂ ಎಸ್‍ಸಿ, ಎಸ್.ಟಿ ಜನಾಂಗದವರನ್ನು ಮತ ಪಡೆಯುವುದಕ್ಕಷ್ಟೆ ಸೀಮಿತಗೊಳಿಸಿದೆ ಎಂದು ಅಪ್ಪಚ್ಚುರಂಜನ್ ಆರೋಪಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ.29 ರಂದು ಜಿಲ್ಲೆಗೆ ಆಗಮಿಸಲಿದ್ದು, ಬೆಳಗ್ಗೆ 10.30 ಗಂಟೆಗೆ ನಗರದ ಚೌಡೇಶ್ವರಿ ದೇವಾಲಯದಿಂದ ಜನರಲ್ ತಿಮ್ಮಯ್ಯ ವೃತ್ತದ ವರೆಗೆ ರೋಡ್ ಶೋ ನಡೆಯಲಿದೆ ಎಂದರು.
ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಮಾತನಾಡಿ, ಅಪ್ಪಚ್ಚು ರಂಜನ್ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಅರಿತು ಕಾಂಗ್ರೆಸ್ಸಿಗರು ಹತಾಶರಾಗಿ ಜಾತಿ ರಾಜಕಾರಣ ಮಾಡುವ ಮೂಲಕ ಸಮಾಜವನ್ನು ಒಡೆದು ಮತ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾಂಗೀರ ಸತೀಶ್ ಹಾಗೂ ನಗರ ಮಂಡಲದ ಅಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು.