ನಾಪೋಕ್ಲು ಮೇ 1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (ಜೆಡಿಎಸ್ )ಅಭ್ಯರ್ಥಿ ಎಂ. ಎ. ಮನ್ಸೂರ್ ಆಲಿ ನಾಪೋಕ್ಲುವಿನಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು.
ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ನೇತೃತ್ವದಲ್ಲಿ ಪಟ್ಟಣದಲ್ಲಿರುವ ಜೆಡಿಎಸ್ ಕಚೇರಿಯಿಂದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜೈ ಘೋಷಣೆಗಳೊಂದಿಗೆ ಪಟ್ಟಣದಲ್ಲಿ ರೋಡ್ ಶೋ ನಡೆಸಿದರು.
ನಂತರ ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ವ್ಯಾಪಾರಿಗಳಲ್ಲಿ ಮತ್ತು ಮನೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ಮಾತನಾಡಿ, 2018ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಕೊಡಗಿನ ಜನರು ಮನೆಮಠಗಳನ್ನು ಕಳೆದು ಸಂಕಷ್ಟಕ್ಕೆ ಸಿಲುಕಿದ ಸಂದರ್ಭ ಕುಮಾರಸ್ವಮಿ ಅವರು ಹಲವು ಬಾರಿ ಜಿಲ್ಲೆಗೆ ಭೇಟಿ ನೀಡಿ ಜನರ ಕಣ್ಣೀರನ್ನು ಹೊರೆಸುವ ಕಾರ್ಯ ಮಾಡಿದ್ದಾರೆ. ಜಿಲ್ಲೆಯ ಜಂಬೂರು, ಗಾಳಿಬಿಡಿನಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಮನೆಗಳನ್ನು ನಿರ್ಮಿಸುವ ಕೆಲಸವನ್ನು ಮಾಡಿಕೊಟ್ಟಿದ್ದಾರೆ. ಅದರಂತೆ ಪರಿಹಾರವನ್ನು ನೀಡಿದ್ದಾರೆ. ಇದನ್ನು ಕೊಡಗಿನ ಜನರು ಮರೆಯಲು ಸಾಧ್ಯವಿಲ್ಲ ಎಂದರು.
ಈ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ, ಈ ಹಿಂದೆ ಕಾಂಗ್ರೆಸ್ ಪಕ್ಷದ 17ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಷಯ, ಅದರಂತೆ ಬಿಜೆಪಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಭ್ರಷ್ಟಾಚಾರ ಮತ್ತು 40 ಪರ್ಸೆಂಟ್ ಕಮಿಷನ್ ಪಡೆದು ಸರ್ಕಾರ ನಡೆಸಿದ್ದಾರೆ ಎಂದು ಗಣೇಶ್ ಟೀಕಿಸಿದರು.
ಆದ್ದರಿಂದ ಕ್ಷೇತ್ರದ ಪ್ರಬುದ್ಧ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಆಲಿ ಅವರಿಗೆ ನೀಡಿ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಗಣೇಶ್ ಮನ್ಸುರ್ ಆಲಿ ಪರ ಮತಯಾಚನೆ ಮಾಡಿದರು.
ವಿರಾಜಪೇಟೆ ನಗರ ಜೆಡಿಎಸ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ಹಾಗೂ ನಮ್ಮ ಜಿಲ್ಲೆಗೆ ಹಲವಾರು ಜನಪರ ಕೆಲಸಗಳನ್ನು ಮಾಡಿದ್ದಾರೆ. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯನ್ನು ಯಾವುದೇ ನಿಬಂಧನೆಗಳಿಲ್ಲದೆ ಜಾರಿಗೆ ತರಲಿದೆ. ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಜನರು ಉತ್ತಮ ಬೆಂಬಲವನ್ನು ನೀಡುತ್ತಿದ್ದು, ಈ ಬಾರಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ಜೆಡಿಎಸ್ ಪ್ರಸಾರ ಸಮಿತಿ ಅಧ್ಯಕ್ಷ ಇಸಾಖಾನ್, ಜೆಡಿಎಸ್ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಜಾಶಿರ್ ಮೂರ್ನಾಡು, ಜಿಲ್ಲಾ ಕಾರ್ಯದರ್ಶಿ ಮೋಹನ್ ಮೌರ್ಯ, ಮಡಿಕೇರಿ ನಗರಸಭಾ ಸದಸ್ಯ ಮುಸ್ತಫ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಜೆಡಿಎಸ್ ಮುಖಂಡರಾದ ಎಂ. ಎಸ್.ಇಬ್ರಾಹಿಂ, ಮಹಮ್ಮದ್ ಅಲಿ, ಪಿ.ಎಂ.ರಶೀದ್, ಅಬೂಬಕ್ಕರ್, ಎಂ. ಎ.ಆಸೀಫ್, ಕಾಳೆರ ಅಲಿ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಜರಿದ್ದರು.
ವರದಿ :ಝಕರಿಯ ನಾಪೋಕ್ಲು