ಮಡಿಕೇರಿ ಮೇ 7 : ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುವ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸಮಿತಿಯ ತೀರ್ಮಾನದಂತೆ, ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ದಲಿತ ಕಲ್ಯಾಣಕ್ಕೆ ಪೂರಕವಾದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ಒಳಮೀಸಲಾತಿ ಜಾರಿಗೆ ತರಲು ತಾರತಮ್ಯ ಮಾಡುವ ಮೂಲಕ ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ.
ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಅತ್ಯಾಚಾರ, ಕೋಮು ಗಲಭೆ, ದೌರ್ಜನ್ಯ ಹೆಚ್ಚಾಗಿದೆ. ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟಪಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲು ಆಡಳಿತ ವೈಫಲ್ಯವಿರುವುದರಿಂದ ಬದಲಾವಣೆಯನ್ನು ತರುವ ಅಗತ್ಯವಿದೆ. ಆದ್ದರಿಂದ ಕಾಂಗ್ರೆಸ್ ನ ಇಬ್ಬರು ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿ ಕೊಡಗು ಜಿಲ್ಲೆಯಾದ್ಯಂತ ಈಗಾಗಲೇ ಸಂಘಟನೆಯ ವತಿಯಿಂದ ಮತಯಾಚನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಮತದಾರರು ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತದಾನ ಮಾಡುವಂತೆ ಗಾಯತ್ರಿ ನರಸಿಂಹ ಹಾಗೂ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಪವಿತ್ರ, ಎಲ್ಲಾ ತಾಲೂಕು ಸಂಚಾಲಕರುಗಳು, ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.










