ವಿರಾಜಪೇಟೆ ಮೇ 20 : ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ವಿರಾಜಪೇಟೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ನಗರದ ಗಡಿಯಾರ ಕಂಬ ಹಾಗೂ ಖಾಸಗಿ ಬಸ್ಸು ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ಈ ಸಂದರ್ಭ ವಿರಾಜಪೇಟೆ ಪುರಸಭೆ ಸದಸ್ಯ ಡಿ.ಪಿ.ರಾಜೇಶ್ ಮಾತನಾಡಿ, ಸಿದ್ದರಾಮಯ್ಯ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ನಮ್ಮ ನಾಯಕರಾಗಿದ್ದು, ಇಬ್ಬರು ಜೋಡೆತ್ತುಗಳಂತೆ ಸರ್ಕಾರನ್ನು ಮುನ್ನಡೆಸಿ ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಆರ್.ಕೆ.ಸಲಾಂ, ವಿರಾಜಪೇಟೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಪೊನ್ನಕ್ಕಿ ಇದೇ ಸಂದರ್ಭ ಮಾತನಾಡಿದರು.
ಪುರಸಭೆ ಸದಸ್ಯ ಸಿ.ಕೆ.ಪೃಥ್ವಿನಾಥ್, ನಗರ ಘಟಕದ ಮಾಜಿ ಅಧ್ಯಕ್ಷ ಜಿ.ಜಿ. ಮೋಹನ್, ಡಿ.ಸಿ.ದ್ರುವ ಕುಮಾರ್, ಮಾಳೇಟಿರ ಕಾಶಿ, ಯಜಾಸ್ ಅಹಮ್ಮದ್, ಫಾರೂಕ್, ನಾಸಿರ್ ಹಾಗೂ ಇನ್ನಿತರ ಕಾರ್ಯಕರ್ತರು ಹಾಜರಿದ್ದರು.









