ಬೆಂಗಳೂರು: ವಿಧಾನಸಭೆ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ ಖಾದರ್ ಅವಿರೋಧವಾಗಿ ಆಯ್ಕೆಯಾದರು.
ಸ್ಪೀಕರ್ ಆಗಿ ಆಯ್ಕೆಗೊಂಡ ಯು.ಟಿ ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂಬಸವರಾಜ ಬೊಮ್ಮಾಯಿ ಪೀಠಕ್ಕೆ ಕರೆದುಕೊಂಡು ಬಂದು ಶುಭ ಹಾರೈಸಿದರು.
ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿದುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವವನ್ನು ಸ್ಪೀಕರ್ ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಹಾರೈಸಿದರು.
ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ ವಿಶ್ವಾಸವಿದೆ. ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ. ಹೊಸದಾಗಿ ಆರಿಸಿ ಬಂದ ಸದಸ್ಯರಿಗೆ ಅಭಿನಂದನೆಗಳು. ಸರ್ಕಾರವಾಗಿ ತಮಗೆ ನಾವು ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇವೆ ಎಂದರು.