ಮಡಿಕೇರಿ ಮೇ 25 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಈ ಬೇಡಿಕೆಗೆ ಕೊಡಗು ಮಾತ್ರವಲ್ಲದೆ ರಾಜ್ಯದೆಲ್ಲೆಡೆ ವ್ಯಾಪಕ ಬೆಂಬಲ ದೊರೆತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದು ಕನೆಕ್ಟಿಂಗ್ ಕೊಡವಾಸ್ ಸಂಘಟನೆಯ ಸಂಚಾಲಕ ಶಾಂತೆಯಂಡ ನಿರನ್ ನಾಚಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತೀ ಸರ್ಕಾರದಲ್ಲು ಕೊಡಗನ್ನು ಕಡೆಗಣಿಸಲಾಗುತ್ತಿದೆ ಎಂಬ ಕೊರಗು ಕೊಡವರಿಗಿದ್ದು, ಕಳೆದೆರಡು ದಶಕಗಳಿಂದ ಗೆಲ್ಲಲು ಸಾಧ್ಯವೇ ಇಲ್ಲ ಎಂಬಂತಿದ್ದ ವಿರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಿದೆ. ವಿದ್ಯಾವಂತ ಯುವ ವಕೀಲರನ್ನ ಶಾಸಕ ಸ್ಥಾನಕ್ಕೆ ಆರಿಸಿ ಪ್ರಬುದ್ಧತೆ ಮೆರೆದಿರುವ ಮತದಾರರ ಭಾವನೆಯನ್ನು ಅರಿತು, ಪೊನ್ನಣ್ಣ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಎಐಸಿಸಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಪ್ರಮುಖರನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಪೊನ್ನಣ್ಣ ಅವರು ಕೊಡವರು ಹಾಗೂ ಕೊಡವ ಭಾಷಿಕರು ಎದುರಿಸುತ್ತಿರುವ ಸಾಮಾಜಿಕ ಮತ್ತು ರಾಜಕೀಯ ಹಿನ್ನಡೆಯನ್ನು ಬಲ್ಲವರಾಗಿದ್ದಾರೆ. ಅಲ್ಲದೆ ಕೊಡಗಿನ ಸಮಗ್ರ ಅಭಿವೃದ್ಧಿಯ ಪೂರಕ ಪರಿಕಲ್ಪನೆ ಉಳ್ಳವರಾಗಿದ್ದು, ನಮ್ಮೆಲ್ಲಾ ಸಮಸ್ಯೆಗಳನ್ನು ಸರಿ ಪಡಿಸಲು ಸೂಕ್ತ ವ್ಯಕ್ತಿಯಾಗಿದ್ದಾರೆ. ಒಬ್ಬ ನೈಜ ಅಭಿವೃದ್ಧಿಯ ಚಿಂತಕರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ ವಿರಾಜಪೇಟೆಯ ಮತದಾರರಿಗೆ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಅಭಿನಂದನೆ ಸಲ್ಲಿಸುತ್ತದೆ ಎಂದು ಹೇಳಿದ್ದಾರೆ.
ಪ್ರಪಂಚದ ಎಲ್ಲಾ ಮೂಲೆಯಲ್ಲಿರುವ ಕೊಡವರನ್ನು ಒಗ್ಗೂಡಿಸುವ ಧ್ಯೇಯ ಹೊತ್ತು ಕೊಡವ ಜನಾಂಗದ ಆಚಾರ, ವಿಚಾರ, ಪದ್ಧತಿ ಪರಂಪರೆಗಳನ್ನು ಎತ್ತಿ ಹಿಡಿದು ಮುಂದಿನ ಪೀಳಿಗೆಗೆ ಅದನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿರುವ ಕನೆಕ್ಟಿಂಗ್ ಕೊಡವಾಸ್ ಸಂಘಟನೆ, ಕೊಡವರ ಶ್ರೇಯೋಭಿವೃದ್ಧಿಯ ದೃಷ್ಟಿಯಿಂದ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ದೊರಕಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಒತ್ತಡಗಳನ್ನು ಹೇರಿದೆ ಎಂದು ನಿರನ್ ತಿಳಿಸಿದ್ದಾರೆ.