ಮಡಿಕೇರಿ ಮೇ 25 : ನಾಪೋಕ್ಲುವಿನಲ್ಲಿ ಸುರಿದ ಭಾರಿ ಮಳೆಗೆ ಇತ್ತೀಚೆಗೆ ನಿರ್ಮಿಸಿದ ರಸ್ತೆಯೊಂದು ಮಳೆ ನೀರಿನಲ್ಲಿ ಕೊಚ್ಚಿಹೋದ ಘಟನೆ ನಡೆದಿದೆ.
ನಾಪೋಕ್ಲುವಿನಲ್ಲಿ ಎರಡು ಇಂಚಿಗೂ ಅಧಿಕ ಮಳೆ ಸುರಿದಿದ್ದು, ಇದರಿಂದ ನಾಪೋಕ್ಲು ಪಟ್ಟಣದಿಂದ ಚರಿಯಪರಂಬು ಗ್ರಾಮಕ್ಕೆ ಹೋಗುವ ರಸ್ತೆಯು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಕಳೆದ ಒಂದು ತಿಂಗಳ ಹಿಂದೆ ಚೆರಿಯ ಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಆಗಿನ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ಹಿನ್ನೆಲೆ ಈ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಆದರೆ ಧಾರಾಕಾರವಾಗಿ ಸುರಿದ ಮಳೆಯ ನೀರಿನ ರಬಸಕ್ಕೆ ರಸ್ತೆ ಕೊಚ್ಚಿಹೋಗಿದ್ದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಕಳಪೆ ಕಾಮಗಾರಿ ಆರೋಪ ಮಾಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ನಾಪೋಕ್ಲು ಕೆಪಿಎಸ್ ಶಾಲಾ ಆವರಣದಲ್ಲಿ ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ನಿರ್ಮಾಣವಾಗುತ್ತಿದ್ದು ಇಲ್ಲಿಂದ ಬರುವ ಕೆಸರು ಮಿಶ್ರಿತ ಮಳೆನೀರು ಚರಂಡಿ ನಿರ್ಮಿಸದೆ ಇರುವುದರಿಂದ ನೇರವಾಗಿ ಮಡಿಕೇರಿ- ನಾಪೋಕ್ಲು ಮುಖ್ಯರಸ್ತೆಯಲ್ಲಿ ಹರಿಯುತ್ತಿದೆ. ಅಲ್ಲದೆ ರಸ್ತೆ ಬದಿಯಲ್ಲಿರುವ ಮನೆಯಂಗಳಕ್ಕೂ ಸೇರುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ನಾಪೋಕ್ಲು ವ್ಯಾಪ್ತಿಯ ವಿವಿಧ ಮುಖ್ಯ ರಸ್ತೆಯ ಬದಿಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸದೆ ಮಳೆ ನೀರು ನಡುರಸ್ತೆಯಲ್ಲಿ ಶೇಖರಣೆಗೊಳ್ಳುತ್ತಿದ್ದು ಇದರಿಂದ ರಸ್ತೆ ಸಂಪೂರ್ಣ ಹಾಳಾಗುವ ಮಟ್ಟಕ್ಕೆ ತಲುಪಿದೆ. ಇದರಿಂದ ಸಾರ್ವಜನಿಕರು ವಾಹನ ಚಾಲಕರು ಸಂಚರಿಸಲು ಭವಣೆ ಪಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂದಿನ ತಿಂಗಳು ಮುಂಗಾರು ಪ್ರವೇಶಿಸುತ್ತಿದ್ದು, ಇದಕ್ಕೂ ಮೊದಲು ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಪಂಚಾಯಿತಿ ಹಾಗೂ ಇಲಾಖೆಯವರು ನಾಪೋಕ್ಲು ವ್ಯಾಪ್ತಿಯ ಎಲ್ಲಾ ರಸ್ತೆಗಳಿಗೆ ಚರಂಡಿ ವ್ಯವಸ್ಥೆ ಸೇರಿದಂತೆ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು, ವಾಹನ ಚಾಲಕರು ಒತ್ತಾಯಿಸಿದ್ದಾರೆ.