ಮಡಿಕೇರಿ ಜೂ.2 : ಜಿಲ್ಲೆಯ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಸರ್ಕಾರ ಎಂ.ಎಲ್.ಸಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಹಾಲುಗುಂದ ಗ್ರಾ.ಪಂ ಸದಸ್ಯ ಅಬ್ದುರಹಮಾನ್ (ಅಂದಾಯಿ) ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಶೇಕಡಾ 98 ರಷ್ಟು ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸಿದ್ದಾರೆ.
ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ದೊಡ್ಡ ಸಮುದಾಯ ಮುಸ್ಲಿಮರಾಗಿದ್ದಾರೆ.
ಅಲ್ಪಸಂಖ್ಯಾತರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಂತರದ ಮತಗಳ ಲೀಡ್ ಬಂದಿದೆ.
ಜಿಲ್ಲೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ.
ಆದರೆ ಇದುವರೆಗೆ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನ ದೊರೆತಿಲ್ಲ. ಜಿಲ್ಲೆಯ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ನಾಯಕರನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಎಂ.ಎಲ್.ಸಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಅವಕಾಶ ನೀಡಬೇಕೆಂದು ಅಬ್ದುರಹಮಾನ್ (ಅಂದಾಯಿ) ತಿಳಿಸಿದ್ದಾರೆ.
ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಸ್ಥಾನದಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕು.
ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರಾಗಿರುವ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಹಾಲುಗುಂದ ಗ್ರಾ.ಪಂ ಸದಸ್ಯ ಅಬ್ದುರಹಮಾನ್ (ಅಂದಾಯಿ) ಒತ್ತಾಯಿಸಿದರು.