ಮಡಿಕೇರಿ ಜೂ.6 : ಜೂನ್ ಎರಡನೇ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಸುವಂತೆ ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ರಸಗೊಬ್ಬರ ಪೂರೈಕೆದಾರರು, ವಿತರಕರು ಹಾಗೂ ಇತರರ ಜೊತೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಸಗೊಬ್ಬರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಮತ್ತು ಎಂಒಪಿ ರಸಗೊಬ್ಬರಕ್ಕೆ ಬೇಡಿಕೆ ಇದೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ದಾಸ್ತಾನು ಮಾಡಿಕೊಳ್ಳಬೇಕು. ಜೊತೆಗೆ ಮಣ್ಣು ಆರೋಗ್ಯ ನೋಡಿಕೊಂಡು ಕಾಂಪ್ಲೆಕ್ಸ್ ರಸಗೊಬ್ಬರವನ್ನು ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿ ಇವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೃಷಿಕರು ಯಾವ ಯಾವ ರೀತಿಯ ರಸಗೊಬ್ಬರವನ್ನು ಬಳಸಬೇಕು ಎಂಬ ಬಗ್ಗೆ ಮಣ್ಣು ಆರೋಗ್ಯ ಚೀಟಿಯನ್ನು ನೋಡಿ ರಸಗೊಬ್ಬರ ಬಳಕೆ ಬಗ್ಗೆ ಸಲಹೆ ಮಾಡುವಂತಾಗಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಅವರು ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಜಿಲ್ಲೆಯಲ್ಲಿ ಸೆಪ್ಟೆಂಬರ್ ಅಂತ್ಯದ ವರೆಗೆ ಒಟ್ಟು 73,686 ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು.
ಯೂರಿಯಾ 19,444 ಮೆಟ್ರಿಕ್ ಟನ್, ಡಿಎಪಿ 8,191, ಎಂಒಪಿ 13,855, ಕಾಂಪ್ಲೆಕ್ಸ್ 30,558, ಎಸ್‍ಎಸ್‍ಪಿ 1638 ಒಟ್ಟು 73,686 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ. ಜೊತೆಗೆ ನ್ಯಾನೋ ಯೂರಿಯಾಗೂ ಬೇಡಿಕೆ ಇದೆ ಎಂದು ಶಬನಾ ಎಂ.ಶೇಖ್ ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಯೂರಿಯಾ, ಡಿಎಪಿ, ಎಂಒಪಿ, ಎನ್‍ಪಿಕೆ, ಕಾಂಪ್ಲೆಕ್ಸ್, ಎಸ್‍ಎಸ್‍ಪಿ ರಸಗೊಬ್ಬರ ದಾಸ್ತಾನು ಬಗ್ಗೆ ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯು 4,10,775 ಹೆಕ್ಟೇರ್ ಭೌಗೋಳಿಕ ವಿಸ್ತೀರ್ಣ ಹೊಂದಿದೆ. ಇದರಲ್ಲಿ 1,34,597 ಹೆಕ್ಟೇರ್ ಪ್ರದೇಶ ಅರಣ್ಯದಿಂದ ಆವೃತ್ತವಾಗಿದೆ. 1,20,721 ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆಯಲಾಗುತ್ತದೆ. 30,500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ, 8,534 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾಗೂ 8,956 ಹೆಕ್ಟೇರ್ ಪ್ರದೇಶದಲ್ಲಿ ಸಾಂಬಾರ ಬೆಳೆ ಬೆಳೆಯಲಾಗುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ವಿವರಿಸಿದರು.
ಮೈಸೂರು, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಿಂದ ರಸಗೊಬ್ಬರ ಪೂರೈಕೆಯಾಗಲಿದ್ದು, ಸರಕು ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕಿದೆ ಎಂದು ರಸಗೊಬ್ಬರ ಸಗಟು ಮಾರಾಟಗಾರರು ಗಮನ ಸೆಳೆದರು. ರಸಗೊಬ್ಬರ ಪೂರೈಕೆದಾರರು ಮತ್ತು ಮಾರಾಟಗಾರರು ಸಭೆಯಲ್ಲಿ ಹಲವು ಸಲಹೆ ನೀಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಕೃಷಿ ಇಲಾಖೆಯ ಉಪ ನಿರ್ದೇಶಕ ಬಾಲರಾಜ್ ರಂಗರಾವ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ನಾರಾಯಣ ರೆಡ್ಡಿ, ಕಾಫಿ ಮಂಡಳಿಯ ಅಧಿಕಾರಿ ಅಜಿತ್ ಕುಮಾರ್, ಲೀಡ್ ಬ್ಯಾಂಕ್ ಅಧಿಕಾರಿಗಳು, ರಸಗೊಬ್ಬರ ಮಾರಾಟಗಾರರು, ವಿತರಕರು ಇತರರು ಇದ್ದರು.








