ಮಡಿಕೇರಿ ಜೂ.6 : ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಹಿಂದು ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಜನರ ಅಭಿವ್ಯಕ್ತಿ ಹಾಗೂ ವಾಕ್ ಸ್ವಾತಂತ್ರವನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಎಲ್ಲಾ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಎಂದು ಹೇಳಿ ಇದೀಗ ಕೆಂಪು ಬಸ್‍ಗಳಲ್ಲಿ ಅರ್ಹ ಮಹಿಳೆಯರಿಗೆ ಮಾತ್ರ ಅವಕಾಶ ಎಂದು ಹೇಳಲಾಗುತ್ತಿದೆ. ಐದು ಗ್ಯಾರಂಟಿ ಆಧಾರದಲ್ಲಿ ಮತವನ್ನು ಪಡೆದು ಅಧಿಕಾರಕ್ಕೆ ಬಂದ ನಂತರ ನುಣಿಚಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೂರಿದರು.
200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿ ಇದೀಗ ಹಲವಾರು ನೀತಿಯ ಪಾಲನೆ ಮಾಡುವಂತೆ ಹೇಳಿದೆ. ಅಲ್ಲದೇ ಯಾರಿಗೂ ತಿಳಿಸದೇ ಏಕಾಏಕಿ ವಿದ್ಯುತ್ ದರವನ್ನು ಯೂನಿಟ್‍ಗೆ 70 ಪೈಸೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಬರೆ ಏಳೆಯುವ ಕೆಲಸ ಮಾಡಿರುವುದು ಖಂಡನೀಯ ಎಂದ ರಾಬಿನ್ ದೇವಯ್ಯ, ಚುನಾವಣೆ ಸಂದರ್ಭ ನೀಡಿದ ಐದು ಗ್ಯಾರಂಟಿಗಳನ್ನು ಯಾವುದೇ ಶರತ್ತುಗಳಿಲ್ಲದೇ ಯತಾವತ್ತಾಗಿ ಜಾರಿಗೆ ತರುವಂತೆ ಒತ್ತಾಯಿಸಿದರು.
ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಇದನ್ನು ವಾಪಸ್ಸು ಪಡೆಯುತ್ತೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಗೋ ಹಂತಕರಿಗೆ ಬೆಂಬಲವನ್ನು ಸೂಚಿಸುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ನಾಪಂಡ ಕಾಳಪ್ಪ, ಪಕ್ಷದ ಪ್ರಮುಖರಾದ ಅರಣ್ ಶೆಟ್ಟಿ, ಜಗದೀಶ್, ಎಸ್.ಸಿ.ಸತೀಶ್, ಅನಿತ ಪೂವಯ್ಯ ಮನು ಮಹೇಶ್, ಮನು ಮಂಜುನಾಥ್, ಶ್ವೇತ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.