ಮಡಿಕೇರಿ ಜೂ.8 : ಕಾರ್ಯಕರ್ತರ ಪರಿಶ್ರಮದಿಂದ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ, ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣೆಗೆ ಕೂಡ ಎಲ್ಲರೂ ಸಜ್ಜಾಗುವ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಕರೆ ನೀಡಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಮುಂಗಾರು ಆರಂಭಗೊಳ್ಳಲಿದ್ದು, ಅತಿವೃಷ್ಟಿಯ ಅನಾಹುತಗಳನ್ನು ತಡೆಯಲು ಮತ್ತು ಪರಿಹಾರವನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭರವಸೆ ನೀಡಿದ್ದಾರೆ. ಅವರಿಗೆ ನಾವೆಲ್ಲರು ಅಗತ್ಯ ಸಹಕಾರ ನೀಡಬೇಕು ಮತ್ತು ಮುಂಬರುವ ಚುನಾವಣೆಗಳನ್ನು ಎದುರಿಸಲು ಸಜ್ಜಾಗಬೇಕೆಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಹನ್ ದಾಸ್ ಮಾತನಾಡಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವಂತೆ ಕರೆ ನೀಡಿದರು.
ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ಮನೆಮನೆಗೂ ತಿಳಿಸಿ ಅರ್ಹರಿಗೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ನಗರಸಭಾ ಮಾಜಿ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮಾತನಾಡಿ ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಕೊಡಗಿನ ಮೂವರು ಸಚಿವರಾಗಿದ್ದರು. ಈ ಬಾರಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಕನಿಷ್ಠ ಒಂದು ಸಚಿವ ಸ್ಥಾನ ನೀಡಬೇಕೆಂದು ಹೇಳಿದರು.
ವಲಯಾಧ್ಯಕ್ಷ ಸದಾ ಡೆನ್ನಿಸ್, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಯಶ್ ಡೋಲ್ ಪಾಡಿ, ಉಪಾಧ್ಯಕ್ಷ ವಿ.ಜಿ.ಮೋಹನ್, ಸಂಘಟನಾ ಕಾರ್ಯದರ್ಶಿ ರವಿ ಗೌಡ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಭಾಷಾ, ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷ ಹರಿಪ್ರಸಾದ್ ಚಫ್ರುಲ್ಲಾ, ಭಾರ್ಗವ, ವಿವೇಕಾನಂದ ಹಾಗೂ ಎಲ್ಲಾ ವಲಯ ಅಧ್ಯಕ್ಷರುಗಳು, ಬ್ಲಾಕ್ ಸಮಿತಿ ಸದಸ್ಯರುಗಳು ಹಾಜರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರೌವೂಫ್ ಸ್ವಾಗತಿಸಿ, ವಂದಿಸಿದರು.









