ಮಡಿಕೇರಿ ಜೂ.9 : ಮಳೆಗಾಲದ ಅವಧಿಯಲ್ಲಿ ಪ್ರವಾಹ, ಭೂ ಕುಸಿತ ಉಂಟಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಗಾಳಿ, ಮಳೆಯಿಂದಾಗಿ ಗಿಡ-ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ತೊಂದರೆಯಂತಹ ಸಮಸ್ಯೆಗಳಿಗೆ ಕಂದಾಯ, ಸೆಸ್ಕಾಂ, ಅರಣ್ಯ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳು ಸಮನ್ವಯತೆಯಿಂದ ಕೂಡಲೇ ಸ್ಪಂದಿಸಿ, ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಗಾರು ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತಾಗಬೇಕು. ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡಬೇಕು ಎಂದು ಶಾಸಕರು ಹೇಳಿದರು.
ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಮಾನಸಿಕ ಧೈರ್ಯ ತುಂಬಲು ಆರೋಗ್ಯ ಇಲಾಖೆ ವತಿಯಿಂದ ಆಪ್ತ ಸಮಾಲೋಚಕರನ್ನು ನಿಯೋಜಿಸಬೇಕು ಎಂದರು.
ಕಾಳಜಿ ಕೇಂದ್ರಗಳಿಗೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಯಾವುದೇ ಲೋಪ ದೋಷಗಳಾಗದಂತೆ ಎಚ್ಚರವಹಿಸಬೇಕು. ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಗುರುತಿಸಿರುವ ಸೂಕ್ಷ್ಮ ಪ್ರದೇಶದಲ್ಲಿನ ಜನರಿಗೆ ಕೂಡಲೇ ನೋಟಿಸ್ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ರಾಜಕಾಲುವೆ, ಚರಂಡಿಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಹಾಗೂ ತಾತ್ಕಾಲಿಕವಾಗಿ ರಸ್ತೆಗಳ ಗುಂಡಿ ಮುಚ್ಚಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದರು.
ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಬೇಕು. ಹಾಗೂ ರಸ್ತೆಗಳಿಗೆ ಅಡ್ಡವಾಗಿ ಬೆಳೆದಿರುವ ಗಿಡಗಂಟಿಗಳನ್ನು ಕಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಆರೋಗ್ಯ ಇಲಾಖೆ ವತಿಯಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ರೋಗಗಳು ಹರಡದಂತೆ ಎಚ್ಚರವಹಿಸಿ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಇರಬೇಕು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ಸಿಗಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಶಾಲಾ ಕಟ್ಟಡಗಳ ವರದಿ ನೀಡಬೇಕು ಮತ್ತು ಅಂತಹ ಕಟ್ಟಡಗಳಲ್ಲಿ ಮಕ್ಕಳಿಗೆ ಪಾಠ ಮಾಡಬಾರದು ಎಂದು ಅವರು ಹೇಳಿದರು. ಅಂಗನವಾಡಿಗಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಠಿಕಾಂಶದ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಬೇಕು ಎಂದು ತಿಳಿಸಿದರು.
ತಾ.ಪಂ ಕಾರ್ಯನಿರ್ವಹಣಾಧಿಕಾರಿ ಶೇಖರ್ ಮಾತನಾಡಿ, ಈಗಾಗಲೇ ಗ್ರಾ.ಪಂ ಮಟ್ಟದಲ್ಲಿ ಟಾಸ್ಕ್‍ಫೆÇೀರ್ಸ್ ಸಭೆ ನಡೆಸಲಾಗಿದೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
19 ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಶಾಲೆಗಳ ಮುಖ್ಯೋಪಾಧ್ಯಾಯರನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಸ್ಥಳೀಯವಾಗಿ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಕಿರಣ್ ಗೌರಯ್ಯ ಮಾತನಾಡಿ, ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುವ ಜನರನ್ನು ಗುರುತಿಸಿ ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಎನ್‍ಡಿಆರ್‍ಎಫ್ ಇನ್ಸ್‍ಪೆಕ್ಟರ್ ಶಾಂತಿಲಾಲ್ ಜಾಟಿಯಾ ಅವರು 24 ಸಿಬ್ಬಂದಿಗಳನ್ನು ಒಳಗೊಂಡ ತಂಡವಿದ್ದು ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಕೂಡಲೇ ಸ್ಪಂದಿಸಲಾಗುವುದು ಹಾಗೂ 24*7 ಲಭ್ಯವಿರುವುದಾಗಿ ಹೇಳಿದರು.
ಸೆಸ್ಕ್ ಎಂಜಿನಿಯರ್ ವಿನಯ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಇತರರು ಹಲವು ಮಾಹಿತಿ ನೀಡಿದರು. ತಹಶೀಲ್ದಾರ್ ಪ್ರಕಾಶ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಪಿಡಿಒಗಳು, ಇತರರು ಹಾಜರಿದ್ದರು.








