ಮಡಿಕೇರಿ ಜೂ.12 ಜಿಲ್ಲೆಯಲ್ಲಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-1098 ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ನಡೆದ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳು ಕುಟುಂಬದ ಬಡತನದಿಂದ ಶಾಲೆಗೆ ಹೋಗದೇ ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಾರೆ. ಇದನ್ನು ತಪ್ಪಿಸುವ ಉದ್ದೇಶಕ್ಕಾಗಿ ಸರ್ಕಾರ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದೆ. ಜೊತೆಗೆ ವಿದ್ಯಾರ್ಥಿ ನಿಲಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕಂಡುಬಂದಲ್ಲಿ ಮನವರಿಕೆ ಮಾಡಿ ಶಾಲೆಗೆ ಹೋಗುವಂತೆ ತಿಳಿಸಬೇಕು. ಶಿಕ್ಷಣದಿಂದ ಯಾರೂ ಸಹ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಈ ಬಗ್ಗೆ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಸಲಹೆ ಮಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ವಿಶ್ವ ಬಾಲ ಕಾರ್ಮಿಕ ದಿನ ಪ್ರಯುಕ್ತ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಒದಗಿಸಬೇಕು. ಶಿಕ್ಷಣದ ಮಹತ್ವದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವಂತಾಗಬೇಕು ಎಂದರು.
ಬಾಲ ಕಾರ್ಮಿಕರನ್ನು ದುಡಿಮೆಗೆ ತೊಡಗಿಸಿಕೊಳ್ಳಬಾರದು. ಮಕ್ಕಳಿಗೆ ಶಿಕ್ಷಣ ನೀಡಿದ್ದಲ್ಲಿ ರಾಷ್ಟ್ರದ ಪ್ರಗತಿ ಸಾಧ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಹಿರಿಯ ವಕೀಲ ಕೆ.ಆರ್.ವಿದ್ಯಾಧರ ಗೌಡ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಮಕ್ಕಳು ಶಿಕ್ಷಣವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದರು.
ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸಿಕೊಂಡಲ್ಲಿ 20 ರಿಂದ 50 ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು ಎಂದರು.
`ಎಲ್ಲರೂ ಆರ್ಥಿಕವಾಗಿ ಸಮಾನರಾಗಿದ್ದರೆ ಬಾಲ ಕಾರ್ಮಿಕ ಪದ್ಧತಿ ಕಂಡು ಬರುವುದಿಲ್ಲ. ಆದ್ದರಿಂದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಪಣ ತೊಡಬೇಕು ಎಂದರು.’
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಯ್ಯ ಮಾತನಾಡಿ, ಮಕ್ಕಳ ಬಾಲ್ಯಾವಸ್ಥೆ ಸಂತಸದಿಂದ ಕೂಡಿರಬೇಕು. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತಿಷ್ಠಿತ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ಸೇರಿದಂತೆ ಹಲವು ಪ್ರಯೋಜನ ಪಡೆದು ಉತ್ತಮ ಶಿಕ್ಷಣ ಪಡೆಯುವಂತಾಗಬೇಕು ಎಂದರು.
ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಚೈಲ್ಡ್‍ಲೈನ್-1098 ನಿರ್ದೇಶಕರಾದ ವಿ.ಎಸ್.ರಾಯ್ ಡೇವಿಡ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಕೊನೆಯಾಗಬೇಕು. ಮಕ್ಕಳ ರಕ್ಷಣೆ, ಪೋಷಣೆಗೆ ಒತ್ತು ನೀಡಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು. ಆದಿವಾಸಿ ಮಕ್ಕಳು ಸೇರಿದಂತೆ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದರು.
ಕೊಡಗು ಗ್ರಾಮೀಣಾಭಿವೃದ್ಧಿ ಹಾಗೂ ಚೈಲ್ಡ್‍ಲೈನ್ ಸಂಸ್ಥೆಯು ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಲು ಹಗಲಿರುಳು ಶ್ರಮಿಸುತ್ತಿದೆ. ಮಕ್ಕಳ ರಕ್ಷಣೆಗೆ ಸದಾ ಮುಂದಾಗಿದೆ ಎಂದರು.
ಜಿ.ಪಂ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಎಸ್.ಎಲ್.ಹರ್ಷವರ್ಧನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ, ಉಪ ಪ್ರಾಂಶುಪಾಲ ನಳಿನಿ, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶೀರಾಝ್ ಅಹ್ಮದ್ ಇತರರು ಹಾಜರಿದ್ದರು.
ಕಾರ್ಮಿಕ ಇಲಾಖೆಯಿಂದ ಹೊರತಂದಿರುವ ಪೋಸ್ಟರ್‍ನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನೀಯರು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಹಾಡು ಹಾಡಿದರು. ಚಿತ್ರಕಲೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*