ಮಡಿಕೇರಿ ಜೂ.14 : ಓದುವ ಹವ್ಯಾಸ ಬದುಕಿಗೊಂದು ಅರ್ಥ ಕಲ್ಪಿಸುತ್ತದೆ, ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ ಕೊಡವ ಕಾದಂಬರಿ, ಕೊಡವ ಮಕ್ಕಡ ಕೂಟದ 66ನೇ ಕೃತಿ “ಬೇರ್” ನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮನುಷ್ಯನ ಬದುಕು ಏನು ಎಂಬುವುದನ್ನು ಅರಿತುಕೊಳ್ಳಲು ಪುಸ್ತಕಗಳು ಸಹಕಾರಿಯಾಗಿವೆ. ಆದ್ದರಿಂದ ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಪುಸ್ತಕಗಳನ್ನು ಓದುವಂತಾಗಬೇಕು, ಯುವಕ, ಯುವತಿಯರಿಗೆ ಮಾರ್ಗದರ್ಶನ ನೀಡುವಂತಹ ಪುಸ್ತಕಗಳು ಪ್ರಕಟಗೊಳ್ಳಬೇಕು ಎಂದರು.
ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರು ಅನೇಕ ಉತ್ಸಾಹಿ ಸಾಹಿತಿಗಳಿಗೆ ಪ್ರೋತ್ಸಾಹವನ್ನು ನೀಡಿದ್ದಾರೆ. ಇಲ್ಲಿಯವರೆಗೆ 66 ಪುಸ್ತಕಗಳನ್ನು ಹೊರ ತಂದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು, ಕೊಡಗಿನ ಸಾಹಿತ್ಯ ಕ್ಷೇತದ ಬೆಳವಣಿಗೆಯಲ್ಲಿ ಇವರ ಪಾತ್ರವೂ ಪ್ರಮುಖವಾಗಿದೆ ಎಂದು ವೀಣಾ ಅಚ್ಚಯ್ಯ ಶ್ಲಾಘಿಸಿದರು.
ಪುರಾತನ ಧರ್ಮ, ಸಂಸ್ಕೃತಿಯನ್ನು ಉಳಿಸಿಕೊಂಡು ಬಂದ ತಂದೆ, ತಾಯಂದಿರ ನಿರೀಕ್ಷೆಯನ್ನು ಹುಸಿಯಾಗಿಸಿದಾಗ ಅವರು ಅನುಭವಿಸುವ ಸಂಕಟವನ್ನು ಪುಸ್ತಕದಲ್ಲಿ ವಿವರಿಸಲಾಗಿದೆ. ಇಂದಿನ ಯುವ ಪೀಳಿಗೆ ಈ ಪುಸ್ತಕವನ್ನು ಓದಿ ಅರ್ಥೈಸಿಕೊಳ್ಳುವ ಅಗತ್ಯವಿದೆ ಎಂದರು.
“ಬೇರ್” ಕಾದಂಬರಿಯ ರಚನೆಕಾರ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಉತ್ತಮ ಚಲನಚಿತ್ರಗಳನ್ನು ತೆರೆಗೆ ತಂದಿದ್ದಾರೆ ಎಂದು ಅವರು ಕೊಂಡಾಡಿದರು.
ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಮಾತನಾಡಿ, ಕೊಡಗಿನಲ್ಲಿ ಕೌಟುಂಬಿಕ ಸಂಸ್ಕೃತಿಯ ಕ್ರಾಂತಿ ಆಗಬೇಕು. ಇಂದಿನ ಪೀಳಿಗೆಗೆ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಅರಿವು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳನ್ನು ಹೆಚ್ಚು ಜಾಗೃತಗೊಳಿಸಬೇಕು ಎಂದು ಕಿವಿಮಾತು ಹೇಳಿದರು.
ಕೊಡಗಿನಲ್ಲಿ ಪುಸ್ತಕಗಳ ಮಾರಾಟವಾಗುತ್ತಿಲ್ಲ, ಜಿಲ್ಲೆಯಲ್ಲಿ ಒಂದೇ ಗ್ರಂಥಾಲಯ ಕಾರ್ಯನಿರ್ವಹಿಸುತ್ತಿದೆ. ಸ್ಥಳೀಯ ಲೇಖಕರ ಪುಸ್ತಕಗಳನ್ನು ಮಾರಾಟ ಮಾಡಲು ಮಳಿಗೆಯ ಅಗತ್ಯವಿದ್ದು, ಆಸಕ್ತರು ಮಳಿಗೆಯನ್ನು ತೆರೆಯುವಂತಾಗಬೇಕು. ಆ ಮೂಲಕ ಕೊಡಗಿನ ಲೇಖಕರಿಗೆ ಸಹಕಾರಿಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಮಾತನಾಡಿ, ಶರವೇಗದ ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಆಚಾರ, ವಿಚಾರ, ಕಲೆ, ಸಂಸ್ಕೃತಿಯನ್ನು ಬೆಳೆಸುವ ಕೆಲಸ ಆಗಬೇಕು. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
“ಬೇರ್” ಕೃತಿಯ ಲೇಖಕ, ಮಾಜಿ ಯೋಧ, ನಿರ್ದೇಶಕ, ನಿರ್ಮಾಪಕ, ನಟ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ಇಂದಿನ ಯುವ ಪೀಳಿಗೆ ತಂದೆ, ತಾಯಿಯ ಮಾತು ಕೇಳದೆ ನಮ್ಮ ಆಚಾರ, ವಿಚಾರವನ್ನು ಮರೆತು ನಮ್ಮದಲ್ಲದ ಸಂಸ್ಕೃತಿಯನ್ನು ಅನುಸರಿಸಿದಾಗ ಆಗುವ ಕಷ್ಟ, ನಷ್ಟ, ತಂದೆ, ತಾಯಿಯ ಸಂಕಟವನ್ನು “ಬೇರ್” ಪುಸ್ತಕದಲ್ಲಿ ಮನೋಜ್ಞವಾಗಿ ವಿವರಿಸಲಾಗಿದೆ ಎಂದರು.
ಅನೇಕ ಭಾವನಾತ್ಮಕ ವಿಚಾರಧಾರೆಗಳಿಗೆ ಒತ್ತು ನೀಡಲಾಗಿದೆ. ಈ ಕಾದಂಬರಿ ಚಲನಚಿತ್ರವಾಗಿ ತೆರೆಯ ಮೇಲೆ ಬರಲಿದೆ, ಈಗಾಗಲೇ ಅರ್ಧ ಚಿತ್ರೀಕರಣವಾಗಿದ್ದು, ಮುಂದಿನ ದಿನಗಳಲ್ಲಿ ಸಿನಿಮಾದ ಮೂಲಕ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
::: 66 ಪುಸ್ತಕಗಳು :::
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಬಗ್ಗೆ ಕಾಳಜಿ, ಭಾಷೆ, ಸಂಸ್ಕೃತಿ, ಸಾಹಿತ್ಯದ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ಕೂಟವು ನಿರಂತರವಾಗಿ ಪುಸ್ತಕಗಳನ್ನು ಬಿಡುಗಡೆ ಮಾಡುತ್ತಾ ಬಂದಿದೆ ಎಂದರು.
ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 66 ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ. ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಲಭಿಸಿದ್ದು, ಮೂರು ಪುಸ್ತಕಗಳು ಕೊಡವ ಸಿನಿಮಾವಾಗಿದೆ. ಅಲ್ಲದೆ ಹಲವು ದಾಖಲೀಕರಣ ಪುಸ್ತಕ, ಸಾಧಕರ ವಿವರದ ಪುಸ್ತಕ, ಕೊಡಗಿನ ಹಾಗೂ ಕೊಡವ ಆಚಾರ, ವಿಚಾರ ಸಂಬಂಧಪಟ್ಟಂತ ಪುಸ್ತಕ, ಕೊಡಗಿನ ಎರಡು ಮಹಾವೀರ ಚಕ್ರ ಪುರಸ್ಕೃತ ವೀರ ಯೋಧರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಾಹಿತ್ಯ ಮತ್ತು ಸಾಹಿತಿಗಳನ್ನು ಪ್ರೋತ್ಸಾಹಿಸುವ ಕಾರ್ಯ ಕೂಟದ ವತಿಯಿಂದ ಇನ್ನು ಮುಂದೆಯೂ ನಿರಂತರವಾಗಿ ನಡೆಯಲಿದೆ ಎಂದು ಅಯ್ಯಪ್ಪ ತಿಳಿಸಿದರು.
ಚೆಟ್ಟಳ್ಳಿಯ ಅವರ್ ಕ್ಲಬ್ ಅಧ್ಯಕ್ಷೆ ಐಚೆಟ್ಟಿರ ಸುನಿತಾ ಮಾಚಯ್ಯ ಉಪಸ್ಥಿತರಿದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*