ಮಡಿಕೇರಿ ಜೂ.16 : ಅಂತರರಾಷ್ಟ್ರೀಯ 9ನೇ ಯೋಗ ದಿನಾಚರಣೆಗೆ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಯೋಗ ಸಂಸ್ಥೆಗಳು, ನೆಹರು ಯುವ ಕೇಂದ್ರ, ರೆಡ್‍ಕ್ರಾಸ್ ಸಂಸ್ಥೆ ಪ್ರತಿನಿಧಿಗಳು, ವಿವಿಧ ಕಾಲೇಜುಗಳ ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕಗಳು, ವಸತಿ ಶಾಲೆಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಹೀಗೆ ಎಲ್ಲರೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸುವಂತಾಗಬೇಕು ಎಂದು ತಿಳಿಸಿದರು.
ಇದೇ ಜೂ.21 ರಂದು ನಗರದ ಗೌಡ ಸಮಾಜದಲ್ಲಿ ನಡೆಯುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ನಿರ್ದೇಶನ ನೀಡಿದರು.
ಜಿಲ್ಲಾ ಮಟ್ಟದ ಜೊತೆಗೆ ತಾಲ್ಲೂಕು ಮಟ್ಟದಲ್ಲಿ ಯೋಗ ದಿನಾಚರಣೆ ಆಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ಮಾಹಿತಿ ನೀಡಿ, ಇದೇ ಜೂ.21 ರಂದು ಬೆಳಗ್ಗೆ 6.30 ಗಂಟೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಚಾಲನೆಗೊಳ್ಳಲಿದೆ. ಬೆಳಗ್ಗೆ 7 ರಿಂದ 8 ಗಂಟೆಯವರೆಗೆ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ತಿಳಿಸಿದರು.
ಅಧಿಕಾರಿಗಳು, ಸಿಬ್ಬಂದಿಗಳು, ಯೋಗ ಸಂಸ್ಥೆಯ ಪ್ರತಿನಿಧಿಗಳು, ಎನ್‍ಸಿಸಿ, ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜೂ.10 ರಂದು ಸೂರ್ಯ ನಮಸ್ಕಾರ ಅಭ್ಯಾಸ ಮಾಡಲಾಗಿದೆ, ಜೂ.15 ರಂದು ರಾಜಾಸೀಟಿನಲ್ಲಿ ಯೋಗ ಪ್ರೋಟೋಕಾಲ್ ಅನಾವರಣ ಮಾಡಲಾಗಿದೆ ಎಂದು ಡಾ.ರೇಣುಕಾದೇವಿ ವಿವರಿಸಿದರು.
ಯೋಗ ಶಿಕ್ಷಕ ಮಹೇಶ್ ಕುಮಾರ್ ಯೋಗ ದಿನಾಚರಣೆ ಯಶಸ್ಸುಗೊಳಿಸುವಲ್ಲಿ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವೈದ್ಯರಾದ ಡಾ.ರಾಜಾರಾಂ, ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಲಯನ್ಸ್ ಸಂಸ್ಥೆಯ ಅಂಬೆಕಲ್ ನವೀನ್, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಜಿ.ಪಂ.ಯೋಜನಾ ನಿರ್ದೇಶಕ ಜಗದೀಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ, ಪೊಲೀಸ್ ನಿರೀಕ್ಷಕ ನಾಗೇಶ್, ನಗರಸಭೆ ಪರಿಸರ ಎಂಜಿನಿಯರ್ ಸೌಮ್ಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿ ಗಾಯತ್ರಿ, ಸವಿತಾ, ಶಿಲ್ಪ ರೈ, ಇತರರು ಹಲವು ಮಾಹಿತಿ ನೀಡಿದರು.
ಅಂತರರಾಷ್ಟ್ರೀಯ 9ನೇ ಯೋಗ ದಿನಾಚರಣೆ ಪ್ರಯುಕ್ತ `ವಸುದೈವ ಕುಟುಂಬಕ್ಕಾಗಿ ಯೋಗ’ ಕುರಿತು ಆಯುಷ್ ಇಲಾಖೆಯಿಂದ ಹೊರತಂದಿರುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.










