ಮಡಿಕೇರಿ ಜೂ.22 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಅವರನ್ನು ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.
ಬಾಳುಗೋಡು ಕೊಡವ ಸಮಾಜದಲ್ಲಿ ಒಕ್ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಹೂಗುಚ್ಛ ನೀಡಿ ಸನ್ಮಾನಿಸಿ ಗೌರವಿಸಿದರು.
ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಪ್ರಾಸ್ತಾವಿಕ ಮಾತನಾಡಿ, ಕೊಡಗಿನ ಪ್ರತಿಭಾವಂತ ಯುವ ಮುಖಂಡ ಕ್ಷೇತ್ರದಿಂದ ಆಯ್ಕೆಯಾಗಿ ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಆಯ್ಕೆಯಾಗಿರುವುದು ಕೊಡಗಿಗೆ ಹೆಮ್ಮೆಯ ವಿಷಯ ಎಂದರು.
ಇದೇ ಸಂದರ್ಭ ಬಾಳುಗೋಡಿನ ಕೊಡವ ಸಮಾಜಗಳ ಒಕ್ಕೂಟದ ಮೈದಾನದ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳಿಗೆ ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಒಕ್ಕೂಟದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಕೊಡಗಿನ ಅಭಿವೃದ್ಧಿಗೆ ಕಾರ್ಯನಿರ್ವಹಿಸುವುದಾಗಿ ಹಾಗೂ ಭ್ರಷ್ಟಾಚಾರದ ರಹಿತ ಆಡಳಿತವನ್ನು ನೀಡುವುದಾಗಿ ಹೇಳಿದರು. ಅಲ್ಲದೆ ಸಮಾಜ ಬಾಂಧವರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಒಕ್ಕೂಟದ ಉಪಾಧ್ಯಕ್ಷರುಗಳಾದ ಮಾಳೇಟಿರ ಅಭಿಮನ್ಯು ಕುಮಾರ್, ಮಂಡುವಂಡ ಮುತ್ತಪ್ಪ, ಗೌರವಾಧ್ಯಕ್ಷರಾದ ಪರದಂಡ ಸುಬ್ರಮಣಿ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಲ್ಲನಮಡ ರೀಟಾ ದೇಚಮ್ಮ ಹಾಜರಿದ್ದರು.
ಅದೇಂಗಡ ಸರೋಜ, ಅಪ್ಪುಮಣಿಯಂಡ ಶೈಲಾ ಪ್ರಾರ್ಥಿಸಿದರು. ಗೌರವ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ಸ್ವಾಗತಿಸಿ, ಸರ್ವರನ್ನು ವಂದಿಸಿದರು.










