ಮಡಿಕೇರಿ ಜೂ.24 : ಕಾಲೇಜು ಶಿಕ್ಷಣ ಇಲಾಖೆ, ಇತಿಹಾಸ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಡಿಕೇರಿ ಸರ್ಕಾರಿ ಪ್ರಾಚ್ಯ ವಸ್ತು ಸಂಗ್ರಹಾಲಯದ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚೀನ ನಾಣ್ಯಗಳ ಪ್ರದರ್ಶನ ಮತ್ತು ಇತಿಹಾಸದ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚೀನ ನಾಣ್ಯಗಳ ಸಂಗ್ರಹಕಾರ ಪಿ.ಕೆ.ಕೇಶವಮೂರ್ತಿ, ವಿದ್ಯಾರ್ಥಿ ಜೀವನದಲ್ಲೇ ಉತ್ತಮ ಹಾವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಮೌಲ್ಯಧರಿತ ಶಿಕ್ಷಣವನ್ನು ಪಡೆದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಯಶಸ್ವಿ ಜೀವನ ನಡೆಸಬಹುದು ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕ ಭಾಷಣ ಮಾಡಿದ ಕಾಲೇಜಿನ ಇತಿಹಾಸ ಉಪನ್ಯಾಸಕಿ ಡಾ. ರಾಧಿಕಾ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಇತಿಹಾಸವು ಎಡಪಂತೀಯ ಹಾಗೂ ಬಲಪಂತೀಯರ ನಡುವೆ ಸಿಕ್ಕಿ ಸ್ಥಿತ್ಯಂತರಕ್ಕೆ ಒಳಗಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ನೈಜ ಇತಿಹಾಸದ ಕುರಿತು ಗಮನ ಹರಿಸಬೇಕು ಮತ್ತು ಭೋದಕ ವರ್ಗ ನೈಜ ಇತಿಹಾಸವನ್ನು ಬೋಧಿಸಬೇಕು ಎಂಬುದಾಗಿ ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಡಿ.ನಿರ್ಮಲ, ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಮಡಿಕೇರಿಯ ಸರ್ಕಾರಿ ಪ್ರಾಚ್ಯ ವಸ್ತು ಸಂಗ್ರಹಾಲಯದ ಕ್ಯುರೇಟರ್ ಆಗಿರುವ ರೇಖಾ ಅವರು ಪ್ರಾಚೀನ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಭೋದಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ರೀನಾ ನಿರೂಪಿಸಿ ದೀಕ್ಷಿತ್ ವಂದಿಸಿದರು.
ಉಪನ್ಯಾಸ ಕಾರ್ಯಕ್ರಮದ ನಂತರ ಕಾಲೇಜು ಸಭಾಂಗಣದಲ್ಲಿ ಪ್ರಾಚೀನ ನಾಣ್ಯಗಳ ಪ್ರದರ್ಶನವು ನಡೆಯಿತು. ಈ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಡಿ.ನಿರ್ಮಲ ಉದ್ಘಾಟಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪ್ರೈಮರಿ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಣ್ಯಗಳನ್ನು ವೀಕ್ಷಿಸಿದರು.