ಮಡಿಕೇರಿ ಜೂ.27 : ಮಡಿಕೇರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಅವರು ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ನಗರದಲ್ಲಿ ಶಾಸಕರನ್ನು ಭೇಟಿಯಾದ ಅವರು ಮಡಿಕೇರಿ ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.
ಶಾಶ್ವತ ಕುಡಿಯುವ ನೀರಿನ ಯೋಜನೆ ಎಂದು ಪ್ರತಿಬಿಂಬಿಸಿ ರೂಪಿಸಲಾದ ಕುಂಡಾಮೇಸ್ತ್ರಿ ಯೋಜನೆಯಿಂದ ಕೋಟ್ಯಾಂತರ ರೂ. ನಷ್ಟವಾಗಿದೆ, ಬೇಸಿಗೆ ಕಾಲದಲ್ಲಿ ನೀರಿನ ಕೊರತೆ ಎದುರಾಗಿದೆ. ಆದ್ದರಿಂದ ಈ ಯೋಜನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು.
ನಗರದಲ್ಲಿ ನಿರ್ಮಿಸಲಾಗಿರುವ ಹೈ-ಟೆಕ್ ಖಾಸಗಿ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿ ಪಡಿಸಬೇಕು.
ನಗರದಲ್ಲಿರುವ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದ್ದು, ಮಾಂಸ ಮತ್ತು ಮೀನು ಮಾರುಕಟ್ಟೆಯಲ್ಲಿ ನೀರು ಸೇರಿದಂತೆ ಮೂಲಭೂತ ಸೌಲಭ್ಯವಿಲ್ಲದೆ ವ್ಯಾಪಾರಿಗಳು ನಿತ್ಯ ಕಷ್ಟ ಅನುಭವಿಸುತ್ತಿದ್ದಾರೆ. ಅಶುಚಿತ್ವದ ವಾತಾವರಣವಿದ್ದು, ಇದೇ ಪ್ರದೇಶದಲ್ಲಿ ಮೀನು, ಮಾಂಸ, ತರಕಾರಿ ವ್ಯಾಪಾರ ಮಾಡಿದರೆ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡಿದಂತ್ತಾಗುತ್ತದೆ. ಆದ್ದರಿಂದ ಮಾರುಕಟ್ಟೆಗೆ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳನ್ನು ವೈಜ್ಞಾನಿಕ ರೂಪದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ದಿನದಿಂದ ದಿನಕ್ಕೆ ವಾಹನದಟ್ಟಣೆ ಹೆಚ್ಚಾಗುತ್ತಿದ್ದು, ಸ್ಥಳೀಯರು ನಿತ್ಯ ಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಭಾಗದಲ್ಲಿ ಮೇಲು ಸೇತುವೆ ನಿರ್ಮಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.
ಕಲಾ ಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ಮಡಿಕೇರಿ ನಗರದಲ್ಲಿ ಸುಸಜ್ಜಿತ ಕಲಾಮಂದಿರವನ್ನು ನಿರ್ಮಿಸಬೇಕು. ನಗರಸಭಾ ಕಚೇರಿಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಸಾರ್ವಜನಿಕರ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡಿ ವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿಗೆ ಯೋಜನೆ ರೂಪಿಸಬೇಕು.
ನಗರದಲ್ಲಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ನಿವೇಶನ ಮಂಜೂರು ಮಾಡಿಸಿ ಸ್ವಂತ ಕಟ್ಟಡ ನಿರ್ಮಿಸಿ ಕೊಡಬೇಕು ಎಂದು ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಮನವಿ ಮಾಡಿದರು.
ಅಲ್ಲದೆ 10 ಹೆಚ್.ಪಿ ಸಾಮಥ್ರ್ಯದ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಬೇಕೆನ್ನುವ ಸರ್ಕಾರದ ಆದೇಶವಿದ್ದರೂ ಕೊಡಗು ಜಿಲ್ಲೆಯ ಯಾವುದೇ ಭಾಗದಲ್ಲಿ ಉಚಿತ ವಿದ್ಯುತ್ ನೀಡುತ್ತಿಲ್ಲ. ಆದ್ದರಿಂದ ರೈತರು ಹಾಗೂ ಬೆಳೆಗಾರರ ಹಿತದೃಷ್ಟಿಯಿದ ಕೃಷಿ ಕಾರ್ಯಕ್ಕೆ ಉಚಿತ ವಿದ್ಯುತ್ ನೀಡಲು ಮತ್ತೊಮ್ಮೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಶಾಸಕರ ಬಳಿ ಒತ್ತಾಯಿಸಿದರು.








