ಸೋಮವಾರಪೇಟೆ ಜು.2 : ಸೋಮವಾರಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ. ವಕೀಲರ ಸಂಘ, ತಾಲೂಕು ಆಡಳಿತ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಾಗಾರ ಈಚೆಗೆ ತಾಲ್ಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು.
ಸೋಮವಾರಪೇಟೆ ಜೆಎಂಎಫ್‌ಸಿಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಕುಲ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿಲ್ಲಬೇಕು. ಇದರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ. ಬಾಲಕಾರ್ಮಿಕರು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷರಾದ ಕಾಟ್ನಮನೆ ವಿಠ್ಠಲ್‌ಗೌಡ ಮಾತನಾಡಿ, ಪಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಪಿಡುಗಾಗಿದೆ. ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ 1986 ರಲ್ಲಿ ಬಾಲ ಕಾರ್ಮಿಕ ನಿಷೇಧ ಕಾಯ್ದೆಯನ್ನು ತರಲಾಗಿದೆ ಎಂದರು. ಕಾನೂನು ಮೀರಿದವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದರು.
ತಹಸೀಲ್ದಾರ್ ಎಸ್.ಎನ್.ನರಗುಂದ, ಹಿರಿಯ ಕಾರ್ಮಿಕ ಅಧಿಕಾರಿ ಕೆ.ಎನ್.ಲೀನಾ, ತಾಲೂಕು ಕಚೇರಿ, ಕಾರ್ಮಿಕ ಇಲಾಖೆ, ಖಜಾನೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.











