ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚಿಗೂ ಅಧಿಕ ಮಳೆಯಾಗಿದೆ.
ದಕ್ಷಿಣ ಕೊಡಗಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಸುಂಟಿಕೊಪ್ಪದ ಕಂಬಿಬಾಣೆ ಗ್ರಾಮದಲ್ಲಿ ಮರಿಯಾ ಲಲಿತ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ವಿದ್ಯುತ್ ಕಂಬಗಳು ಕೂಡ ಬಿದ್ದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ ಅರೆಕಾಡು ಗ್ರಾಮದ ನೇತಾಜಿ ನಗರ ಬಡಾವಣೆಯಲ್ಲಿ ಗುರುರಾಜ್ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ.
ಮಡಿಕೇರಿ, ಕೊಯನಾಡು, ಸಂಪಾಜೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಯನಾಡು ಬಳಿ ಹೆದ್ದಾರಿಗೆ ಹಾನಿಯಾಗುವ ಸಾಧ್ಯತೆ ಕಂಡು ಬಂದಿದೆ. ತಲಕಾವೇರಿ ಮತ್ತು ಭಾಗಮಂಡಲ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ನದಿ ನೀರು ರಸ್ತೆಯನ್ನು ಆವರಿಸುತ್ತಿದೆ.
ಮರ ಮತ್ತು ವಿದ್ಯುತ್ ಕಂಬಗಳು ಬೀಳುತ್ತಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ 24 ಗಂಟೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸಲಹೆ ಮಾಡಿದೆ.











